ರಾಜ್ಯ

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌
ಹೈಕೋರ್ಟ್‌
Published On :

ಬೆಂಗಳೂರು: ಈ ವರ್ಷಾಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿಗಳೂ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲು ಜತೆಗೆ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲು ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಅವಧಿ ಮುಗಿಯಲಿರುವ ರಾಜ್ಯದ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಅನುವಾಗುವಂತೆ ವಾರ್ಡ್‌ವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ನಿರ್ದೇಶಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿತು. ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಲಾಗಿದೆ.

ಕಲಬುರಗಿ ಜಿಲ್ಲೆ ಶಹಬಾದ ತಾಲ್ಲೂಕಿನ ವಾಡಿ ಪುರಸಭೆಯ ಅವಧಿ 2020ರ ನವೆಂಬರ್ 11ರಂದು ಮತ್ತು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಪುರಸಭೆ ಅವಧಿ ಇದೇ ವರ್ಷದ ಸೆಪ್ಟಂಬರ್‌ನಲ್ಲಿ ಕೊನೆಗೊಂಡಿದೆ. ಅಕ್ಟೋಬರ್‌ನಲ್ಲಿ 59 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದೆ. ಉಳಿದ 126 ನಗರ ಸ್ಥಳೀಯ ಸಂಸ್ಥೆಗಳ ಅವಧಿ ನವೆಂಬರ್ ಮತ್ತು ಡಿಸೆಂಬರ್‌ಗೆ ಅಂತ್ಯವಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇವೆಲ್ಲವುಗಳಿಗೆ ಮೀಸಲಾತಿ ನಿಗದಿಪಡಿಸುವಂತೆ ಈ ವರ್ಷದ ಜನವರಿ ಮತ್ತು ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಆದರೆ, ಈವರೆಗೂ ಪ್ರಯೋಜನವಾಗಿಲ್ಲ. ಚುನಾವಣೆ ವಿಳಂಬವಾದರೆ ಆಡಳಿತಾಧಿಕಾರಿಗಳ ನೇಮಕವಾಗಲಿದೆ. ಸಕಾಲಕ್ಕೆ ಚುನಾವಣೆ ನಡೆಸದಿರುವುದು ಸಂವಿಧಾನದ 243-ಯು ವಿಧಿ ಉಲ್ಲಂಘನೆಯಾಗಲಿದೆ, ಚುನಾವಣೆ ವಿಳಂಬವಾದರೆ ಸರಕಾರವು ಆಡಳಿತಾಧಿಕಾರಿ ನೇಮಕ ಮಾಡಲಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಲಿದೆ ಎಂದು ಆಯೋಗ ತನ್ನ ಅರ್ಜಿಯಲ್ಲಿ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.