Cyclone Ditwah ಎಫೆಕ್ಟ್: ರಾಜ್ಯಾದ್ಯಂತ 5 ದಿನ ಭಾರಿ ಮಳೆ; ಬೆಂಗಳೂರಿನಲ್ಲಿ ಚಳಿ ತೀವ್ರ!
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ದಿತ್ವಾ ಚಂಡಮಾರುತ (Ditwah Cyclone)ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಶನಿವಾರ ಎಚ್ಚರಿಕೆ ನೀಡಿದೆ.
ಶ್ರೀಲಂಕಾಗೆ ಅಪ್ಪಳಿಸಿರುವ ದಿತ್ವಾ ಚಂಡಮಾರುತ ಭಾರತದತ್ತ ಮುಖ ಮಾಡಿದ್ದು, ಭಾರತದ ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಳದಿ ಅಲರ್ಟ್, ಇನ್ನು ಕೆಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವೆಂಬರ್ 30ರಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳವರೆಗೆ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ವಿಪರೀತ ಮಂಜು ಬೀಳುವ ಸಾಧ್ಯತೆ ಇದೆ.
ನಾಳೆ ಅಂದರೆ ನವೆಂಬರ್ 30 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು ಸೇರಿ 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಉತ್ತರದಲ್ಲಿ ಒಣಹವೆ
ಇನ್ನು ಕರ್ನಾಟಕದ ಉತ್ತರ ಒಳನಾಡಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



