News Headlines 29-11-25 | ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: CM-DCM; ನಾನು ಮಠಾಧೀಶರ ನೆರವು ಕೇಳಿರಲಿಲ್ಲ: HDK; ಬೆಂಗಳೂರು ಗಢಗಢ: ತಾಪಮಾನ ಕನಿಷ್ಠ 16ಕ್ಕೆ ಕುಸಿತ!

1. ಬ್ರೇಕ್ ಫಾಸ್ಟ್ ಮೀಟಿಂಗ್ ಸಕ್ಸಸ್: ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ
ಅಧಿಕಾರ ಹಂಚಿಕೆ ಕುರಿತಂತೆ ಹಗ್ಗಜಗ್ಗಾಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ನಿವಾಸ ಕಾವೇರಿಯಲ್ಲಿ ಶನಿವಾರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಸುದೀರ್ಘ ಮಾತುಕತೆ ನಂತರ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ನಮ್ಮಿಬ್ಬರ ನಡುವೆ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ, ಮುಂದೆಯೂ ಅದು ಬರಲ್ಲ, ನಮಗೆ ಕರೆ ಮಾಡಿದ್ದ ಹೈಕಮಾಂಡ್ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದರು. ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ನಡೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ನಿಮ್ಮೆಲ್ಲರ ಬೆಂಬಲದೊಂದಿಗೆ, ನಾವು ಕಾಂಗ್ರೆಸ್ ಸರ್ಕಾರವನ್ನು ತಂದಿದ್ದೇವೆ. ನಮ್ಮ ಭರವಸೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವ ಗುಂಪೂ ಇಲ್ಲ, ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
2. ಸಿಎಂ ಕುರ್ಚಿ ವಿವಾದ: ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿರಲಿಲ್ಲ
ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪಟ್ಟದ ವಿವಾದ ಕುರಿತು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ, ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿರಲಿಲ್ಲ. ನಾನು ಹೇಳೋದು ಸಮಾಜದಲ್ಲಿ ಈ ರೀತಿ ಜಾತಿ ವಿಚಾರ ಹೇಳಿಕೊಂಡು, ಧಾರ್ಮಿಕ ಕ್ಷೇತ್ರಗಳನ್ನು ದುರುಪಯೋಗ ಮಾಡಿಕೊಳ್ಳುವುದು ಯಾವುದೇ ರಾಜಕಾರಣಿಗಳಿಗೆ ಶೋಭೆ ತರಲ್ಲ ಎಂದರು. ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಕರ್ನಾಟಕ ರಾಜಕೀಯದಲ್ಲಿ ಇದು ಬಹಳ ನಿರ್ಣಾಯಕ ಹಂತ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಹೋರಾಟ ಬೀದಿ ಜಗಳವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿದೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ, ಸಿಎಂ ಮತ್ತು ಡಿಸಿಎಂ ನಡುವೆ ಸಮನ್ವಯವಿಲ್ಲ, ಯಾವುದೇ ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
3. ಜಲ ಜೀವನ್ ಮಿಷನ್: ಕೇಂದ್ರದ ಪಾಲಿನ ಹಣ ಬಿಡುಗಡೆಗೆ ಪ್ರಿಯಾಂಕಾ ಖರ್ಗೆ ಪತ್ರ
ಜಲ ಜೀವನ್ ಮಿಷನ್ ಅಡಿಯಲ್ಲಿ ಬಾಕಿ ಇರುವ ಕೇಂದ್ರದ ಪಾಲಿನ ಹಣ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಕರ್ನಾಟಕವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರು ಪೂರೈಸಲಾಗುತ್ತಿದೆ. ಇಲ್ಲಿಯವರೆಗೆ, ಶೇಕಡಾ 86ಕ್ಕಿಂತ ಹೆಚ್ಚು ಗ್ರಾಮೀಣ ಮನೆಗಳಿಗೆ ನೀರಿನ ಸಂಪರ್ಕಗಳನ್ನು ಒದಗಿಸಲಾಗಿದೆ. ಇತರ ಬಹು-ಗ್ರಾಮ ಮತ್ತು ಏಕ-ಗ್ರಾಮ ಯೋಜನೆಗಳು ಪ್ರಗತಿಯ ವಿವಿಧ ಹಂತಗಳಲ್ಲಿವೆ ಎಂದು ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ಕೇಂದ್ರ ಸಚಿವರಿಗೆ ವಿವರಿಸಿದ್ದಾರೆ. ಈ ಯೋಜನೆಗೆ ರಾಜ್ಯ ಸರ್ಕಾರ 24,598 ಕೋಟಿ ವ್ಯಯಿಸುತ್ತಿದ್ದರೆ ಕೇಂದ್ರದ ಪಾಲು 11,786 ಕೋಟಿ ರೂಪಾಯಿ ಆಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ ಎಂದು ಖರ್ಗೆ ಹೇಳಿದ್ದಾರೆ.
4. KSCA ಅಧ್ಯಕ್ಷ ಚುನಾವಣೆ: ಕೆಎನ್ ಶಾಂತಕುಮಾರ್ ಸ್ಪರ್ಧೆಗೆ Highcourt ಅವಕಾಶ
200 ರೂಪಾಯಿ ಹಿಂಬಾಕಿ ಪಾವತಿಸಿಲ್ಲ ಎಂಬ ಕಾರಣಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಹುದ್ದೆಗೆ ಸಲ್ಲಿಸಿದ ನಾಮಪತ್ರವನ್ನು ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಕೆ.ಎನ್ ಶಾಂತಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಕೆಎಸ್‌ಸಿಎ ಚುನಾವಣೆಯಲ್ಲಿ ಕೆ.ಎನ್ ಶಾಂತಕುಮಾರ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿ ಕೋರ್ಟ್ ಆದೇಶ ನೀಡಿದೆ. ನಾಮಪತ್ರ ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ರದ್ದುಗೊಳಿಸಿ, ಈಗಾಲೇ ನೀಡಿರುವ ವೇಳಾಪಟ್ಟಿಯಂತೆ ಡಿ.7ರಂದೇ ಚುನಾವಣೆ ನಡೆಸಲು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ನ್ಯಾಯಪೀಠ ಆದೇಶ ನೀಡಿದೆ. ನಾಮಪತ್ರ ತಿರಸ್ಕಾರಗೊಂಡಿದ್ದರಿಂದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
5. ಬೆಂಗಳೂರು ಗಢಗಢ: ತಾಪಮಾನ ಕನಿಷ್ಠ 16ಕ್ಕೆ ಕುಸಿತ
ಚಳಿಗಾಲ ಆರಂಭವಾಗಿದ್ದು ಬೆಂಗಳೂರಿನಲ್ಲಿ ಇಂದು ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ದಾಖಲಾಗಿದೆ. ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25 ಡಿಗ್ರಿ ಸೆಲ್ಸಿಯಸ್ ಮತ್ತು 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿಸಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಕಾರಣ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ನಾಳೆ ತಮಿಳುನಾಡಿಗೆ ದಿತ್ವಾ ಚಂಡಮಾರುತ ಅಪ್ಪಳಿಸಲಿದ್ದು ಇದರ ಪರಿಣಾಮ ಮುಂದಿನ ವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


