ಬೆಂಗಳೂರು ಉಪನಗರ ರೈಲು ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
148.17 ಕಿಮೀ ಉದ್ದದ ಈ ಮಹತ್ವಾಕಾಂಕ್ಷಿ ಯೋಜನೆಗೆ ರೂ.15,767 ಕೋಟಿ ವೆಚ್ಚ ಅಂದಾಜಿಸಲಾಗಿದ್ದು, ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 20% ಹೂಡಿಕೆ ಮಾಡುತ್ತಿವೆ. ಉಳಿದ 60% ಹಣವನ್ನು ಸಾಲದ ಮೂಲಕ ಸಂಗ್ರಹಿಸಲಾಗುತ್ತಿದೆ.

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆ (BSRP) ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.
ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಬೆಂಗಳೂರು ಉಪನಗರ ರೈಲು ಯೋಜನೆ (BSRP) ವಿಳಂಬಕ್ಕೆ ರಾಜ್ಯ ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯೇ ಪ್ರಮುಖ ಕಾರಣ ಎಂದು ಹೇಳಿದರು.
ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್ಆರ್ಪಿ) ಕಾರಿಡಾರ್ -4 (ಹೀಲಲಿಗೆ–ರಾಜನಕುಂಟೆ) ಯೋಜನೆಗೆ ಅಗತ್ಯವಿರುವ 57 ಏಕರೆ ಭೂಮಿಯಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್ (ಕೆ-ರೈಡ್) ಕೇವಲ 7.8 ಎಕರೆ ಭೂಮಿಯನ್ನು ಮಾತ್ರ ವಶಪಡಿಸಿಕೊಂಡಿದೆ. ಇದೇ ಕಾರಣದಿಂದ ಯೋಜನೆ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.
148.17 ಕಿಮೀ ಉದ್ದದ ಈ ಮಹತ್ವಾಕಾಂಕ್ಷಿ ಯೋಜನೆಗೆ ರೂ.15,767 ಕೋಟಿ ವೆಚ್ಚ ಅಂದಾಜಿಸಲಾಗಿದ್ದು, ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 20% ಹೂಡಿಕೆ ಮಾಡುತ್ತಿವೆ. ಉಳಿದ 60% ಹಣವನ್ನು ಸಾಲದ ಮೂಲಕ ಸಂಗ್ರಹಿಸಲಾಗುತ್ತಿದೆ. ಈಗಾಗಲೇ ಈ ಯೋಜನೆಗೆ ರೂ.2,659 ಕೋಟಿ ವೆಚ್ಚವಾಗಿದೆ ಎಂದು ಮಾಹಿತಿ ನೀಡಿದರು.
ಕೆಎಸ್ಆರ್ ಬೆಂಗಳೂರು ನಗರ ಮತ್ತು ದೇವನಹಳ್ಳಿ (41.4 ಕಿಮೀ) ನಡುವಿನ ಕಾರಿಡಾರ್-1 (ಸಂಪಿಗೆ) ಗಾಗಿ ಜೋಡಣೆ ಯೋಜನೆಗಳನ್ನು ಅನುಮೋದಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದು, ಸಿಗ್ನಲಿಂಗ್ ಮತ್ತು ಟೆಲಿಕಮ್ಯುನಿಕೇಶನ್ ಸೇರಿದಂತೆ ವಿದ್ಯುತ್ ವ್ಯವಸ್ಥೆಗಳ ಸ್ಥಳಾಂತರ ಕಾರ್ಯವೂ ನಡೆಯುತ್ತಿದೆ ಎಂದು ಹೇಳಿದರು.
ಬೈಯ್ಯಪ್ಪನಹಳ್ಳಿ–ಚಿಕ್ಕಬಾಣಾವರ (25 ಕಿಮೀ) ಕಾರಿಡಾರ್ನಲ್ಲಿ ಭೂಸ್ವಾಧೀನ ಪೂರ್ಣಗೊಂಡಿದ್ದು, ನಿಲ್ದಾಣ ನಿರ್ಮಾಣಕ್ಕಾಗಿ ಪ್ರತ್ಯೇಕ ಒಪ್ಪಂದಗಳನ್ನು ನೀಡಲಾಗಿದೆ. ಕೆಂಗೇರಿ–ವೈಟ್ಫೀಲ್ಡ್ (35.5 ಕಿಮೀ) ಮಾರ್ಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಇದೇ ವೇಳೆ 46 ಕಿಮೀ ಉದ್ದದ ಹೀಲಲಿಗೆ–ರಾಜನಕುಂಟೆ ಮಾರ್ಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಮುಂದುವರಿದಿದ್ದು, ಇದು ಯೋಜನೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



