ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಉಭಯ ನಾಯಕರು ಯಾವ ವಿಷಯ ಕುರಿತು ಮಾತನಾಡಿದ್ದಾರೆ ಎಂಬುದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು.

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಮಂಡ್ಯ ಜಿಲ್ಲೆಯ ಆದಿಚುಂಚನಗಿ ಮಹಾಸಂಸ್ಥಾನ ಮಠದಲ್ಲಿ ನಡೆದ ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದಾಗ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಕಿವಿಯಲ್ಲಿ ಗುಟ್ಟಾಗಿ ಮಾತನಾಡಿದ್ದರು. ಈ ಪೋಟೋ ಸಖತ್ ವೈರಲ್ ಆಗುವ ಮೂಲಕ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಉಭಯ ನಾಯಕರು ಯಾವ ವಿಷಯ ಕುರಿತು ಮಾತನಾಡಿದ್ದಾರೆ ಎಂಬುದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು. ಈ ಗುಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಹಿರಂಗಪಡಿಸಿದ್ದಾರೆ.
ಹೌದು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ನಡುವೆ ಯಾವುದೇ ಗುಪ್ತ ಆಲೋಚನೆ ನಡೆದಿಲ್ಲ. ಮಹಿಳಾ ಮೀಸಲಾತಿ ಕುರಿತ ನನ್ನ ಅಭಿಪ್ರಾಯವನ್ನು ಪ್ರಧಾನಿ ಕೇಳಿದರು, ಮಹಿಳಾ ಮೀಸಲಾತಿ ಪರವಾಗಿ ಇದ್ದೇನೆ ಎಂದು ಸಕಾರಾತ್ಮಕವಾಗಿ ಉತ್ತರಿಸಿದ್ದೇನೆ ಅಷ್ಟೆ, ಎಂದು ಸ್ಪಷ್ಟಪಡಿಸಿದರು.
ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿಯವರಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆಯಿದ್ದರೆ 2023ರಲ್ಲೇ ಮೀಸಲಾತಿಯನ್ನು ಜಾರಿಗೆ ತರಬೇಕಿತ್ತು. ಮೀಸಲಾತಿ ಜಾರಿಗೆ ನಮ್ಮ ಅಭ್ಯಂತರವಿಲ್ಲ, ಆದರೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದು ತಿಳಿಸಿದರು.
ಜನಸಂಖ್ಯಾ ನಿಯಂತ್ರಣ ಮಾಡಿರುವ ದಕ್ಷಿಣದ ರಾಜ್ಯಗಳ ಹಿತರಕ್ಷಣೆಗೆ ಹೊಸ ಜನಗಣತಿಯ ಆಧಾರದ ಮೇಲೆ ಸಮಾನ ಹಂಚಿಕೆಯಾಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದರು.
ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಲಿದೆ ಎಂದರು.
ಇದೇ ವೇಳೆ, ಬಿಜೆಪಿಯು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದೆ ಎಂದು ಟೀಕಿಸಿದ ಅವರು, ಹಿಂದೆ ಇದೇ ಯೋಜನೆಗಳಿಂದ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದ ಪ್ರಧಾನಿ ಮತ್ತು ಬಿಜೆಪಿ ನಾಯಕರ ದ್ವಂದ್ವ ನೀತಿ ಈಗ ಬಯಲಾಗಿದೆ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



