ಕಾಲೇಜು ಕ್ಯಾಂಪಸ್ ಚುನಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್: Lyngdoh ಸಮಿತಿ ಆಧಾರದಲ್ಲಿ ಮಹತ್ವದ ನಿರ್ಧಾರ..!
ಲಿಂಗ್ಡೋ ಸಮಿತಿ ವರದಿ ಶಿಫಾರಸುಗಳ ಆಧಾರದಲ್ಲಿ ಚುನಾವಣೆಗಳನ್ನು ಈ ಶೈಕ್ಷಣಿಕ ವರ್ಷದಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಲಿಂಗ್ಡೋ ಸಮಿತಿ ವರದಿ ಶಿಫಾರಸುಗಳ ಆಧಾರದಲ್ಲಿ ಚುನಾವಣೆಗಳನ್ನು ಈ ಶೈಕ್ಷಣಿಕ ವರ್ಷದಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ವಿವಿಧ ವಿದ್ಯಾರ್ಥಿ ಸಂಘಟನೆಗಳೊಂದಿಗೆ ನಡೆದ ಸಭೆಯ ನಂತರ ಮಾತನಾಡಿ, ಚುನಾವಣೆಗಳನ್ನು ಸಂಪೂರ್ಣವಾಗಿ ಹಿಂದಿನ ಮಾದರಿಯಲ್ಲಿ ಅಲ್ಲದೆ, ಇಂದಿನ ಕಾಲೇಜು ಪರಿಸ್ಥಿತಿಗೆ ಹೊಂದುವಂತೆ ಕೆಲವು ತಿದ್ದುಪಡಿ ನಿಯಮಗಳೊಂದಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಮಾತನಾಡಿ, ವಿದ್ಯಾರ್ಥಿ ಚುನಾವಣೆಗಳು ಕೇವಲ ಸಂಘಟನೆಗಳ ಆಯ್ಕೆಯಲ್ಲ, ಬದಲಾಗಿ ಸಂವಿಧಾನದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ವೇದಿಕೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಜವಾಬ್ದಾರಿಯ ಅರಿವು ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಭೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿವೆ. ಎಡಪಂಥೀಯ ಸಂಘಟನೆಗಳಾದ ಎಸ್‌ಎಫ್‌ಐ, ಎಐಎಸ್‌ಎಫ್, ಎಐಡಿಎಸ್‌ಒ ಮತ್ತು ಎಐಎಸ್‌ಒ ಪ್ರತಿನಿಧಿಗಳು ಮಹಿಳಾ ಅಭ್ಯರ್ಥಿಗಳಿಗೆ ನಿರ್ದಿಷ್ಟ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ವಿದ್ಯಾರ್ಥಿ ಜೆಡಿಎಸ್ ಪ್ರತಿನಿಧಿಗಳು ಕನ್ನಡ ಭಾಷಿಕ ವಿದ್ಯಾರ್ಥಿಗಳಿಗೆ ಶೇ.70ರಷ್ಟು ಸ್ಥಾನ ಮೀಸಲಿಡಬೇಕು ಎಂದು ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
ಮತ್ತೊಂದೆಡೆ ಎಬಿವಿಪಿ ಪ್ರತಿನಿಧಿಗಳು ಚುನಾವಣೆಗೆ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ.60ರಷ್ಟು ಹಾಜರಾತಿ ಹಾಗೂ ಯಾವುದೇ ಎಫ್ಐಆರ್ ಅಥವಾ ಶೈಕ್ಷಣಿಕ ಬ್ಯಾಕ್‌ಲಾಗ್ ಇರಬಾರದು ಎಂಬ ಅರ್ಹತಾ ನಿಯಮಗಳನ್ನು ಕಡ್ಡಾಯಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.
ಆದರೆ ಈ ನಿಯಮಗಳಿಗೆ ಎನ್ಎಸ್ಯುಐ ಮತ್ತು ಕೆಲವು ವಿದ್ಯಾರ್ಥಿ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳಲ್ಲಿ ಭಾಗವಹಿಸಿದ ಕಾರಣಕ್ಕೆ ಎಫ್ಐಆರ್ ದಾಖಲಾಗಿರುವ ವಿದ್ಯಾರ್ಥಿಗಳನ್ನು ಚುನಾವಣೆಯಿಂದ ಹೊರಗಿಡುವುದು ಅನ್ಯಾಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ದೊರಕಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ, ಕಾಲೇಜು ಮತ್ತು ವಿಶ್ವವಿದ್ಯಾಲಯ ಆಡಳಿತ ಮಂಡಳಿಗಳು ಚುನಾವಣೆಗಳು ನಡೆದರೆ ಶೈಕ್ಷಣಿಕ ಚಟುವಟಿಕೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದರೂ, ಸರ್ಕಾರ ಸೂಕ್ತ ನಿಯಮಾವಳಿ ರೂಪಿಸಿ ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿವೆ.
ಸರ್ಕಾರ ಈಗ ಲಿಂಗ್ಡೋ ಸಮಿತಿಯ ಮಾರ್ಗಸೂಚಿಗಳ ಆಧಾರದಲ್ಲಿ ಅಂತಿಮ ನಿಯಮಾವಳಿ ರೂಪಿಸುತ್ತಿದ್ದು, ವಿದ್ಯಾರ್ಥಿ ಚುನಾವಣೆಗಳು ನಡೆಯುವ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟವಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



