ನನ್ನನ್ನು ಬೇಕಾದರೆ ನಿಂದಿಸಿ, ಕಲಬುರಗಿ ಮಕ್ಕಳನ್ನು ಅಪಹಾಸ್ಯ ಮಾಡಬೇಡಿ: ಪ್ರಿಯಾಂಕ್ ಖರ್ಗೆ
ಪ್ರತಿ ಬಾರಿಯೂ ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸುತ್ತಿರುವ ಬಿಜೆಪಿ ರಾಜಕೀಯ ದಿವಾಳಿತನದೊಂದಿಗೆ ನೈತಿಕ ಪ್ರಜ್ಞೆಯೂ ದಿವಾಳಿಯಾಗಿರುವುದನ್ನು ನಿರೂಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬಂದಿದೆ. ಇದನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಸೋಲಿನಲ್ಲೂ ಒಂದು ಪರಿಪೂರ್ಣ ದಾಖಲೆ. ಟ್ವೀಟ್ ಎಲ್ಲಿ ಮಹಾಜ್ಞಾನಿ ಎಂದು ಲೇವಡಿ ಮಾಡಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕಲಬುರಗಿಯ ವಿದ್ಯಾರ್ಥಿಗಳನ್ನು ಅವಮಾನಿಸುತ್ತಿರುವ ಬಿಜೆಪಿ, ಅವರ ಆತ್ಮಸ್ಥೈರ್ಯವನ್ನು, ಆತ್ಮವಿಶ್ವಾಸವನ್ನು ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ನಿಮಗೆ ಸಮಸ್ಯೆ ಇದ್ದರೆ ನನ್ನನ್ನು ನಿಂದಿಸಿ, ಕಲಬುರಗಿಯ ಮಕ್ಕಳನ್ನು ಅಪಹಾಸ್ಯ ಮಾಡುತ್ತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.
ಜಿಲ್ಲೆಯ ಶೇಕಡಾವಾರು ಫಲಿತಾಂಶ ಶೇ.85 ಇರಬಹುದು, ಕಳೆದ ಶೈಕ್ಷಣಿಕ ವರ್ಷಕ್ಕಿಂತ ಈ ಬಾರಿ ರಾಜ್ಯ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಮಾಡಿಕೊಳ್ಳುವ ಶಕ್ತಿ ನಮ್ಮ ಜಿಲ್ಲೆಯ ಮಕ್ಕಳಲ್ಲಿದ್ದು, ಅದು ಸಾಧ್ಯವಾಗುತ್ತದೆ ಎಂದಿದ್ದಾರೆ.
ಪ್ರತಿ ಬಾರಿಯೂ ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸುತ್ತಿರುವ ಬಿಜೆಪಿ ರಾಜಕೀಯ ದಿವಾಳಿತನದೊಂದಿಗೆ ನೈತಿಕ ಪ್ರಜ್ಞೆಯೂ ದಿವಾಳಿಯಾಗಿರುವುದನ್ನು ನಿರೂಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿನ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಮಕ್ಕಳಿಗೂ "ದಡ್ಡರು" ಎಂಬ ಹಣೆಪಟ್ಟಿಯನ್ನು ಬಿಜೆಪಿ ಕಟ್ಟುತ್ತಿದೆಯೇ? ಜಿಲ್ಲೆಯ ಮಕ್ಕಳ ಮನಸಿನ ಮೇಲೆ ದುಷ್ಪರಿಣಾಮ ಬೀರುವಂತಹ ಮಾತುಗಳನ್ನಾಡುತ್ತಿರುವ ಬಿಜೆಪಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆ ಇಲ್ಲದಿರುವುದು ನಾಡಿನ ದುರಂತ ಎಂದಿದ್ದಾರೆ.
ಕಲಬುರಗಿ ಜಿಲ್ಲೆಯ ಮಕ್ಕಳ ಶ್ರಮವನ್ನು, ಅವರ ಬೌದ್ಧಿಕ ಸಾಮರ್ಥ್ಯವನ್ನು ಅವಮಾನಿಸುವ, ಅವರ ಆತ್ಮವಿಶ್ವಾಸವನ್ನು ಕುಗ್ಗಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



