ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ ಘೋಷಣೆ..!
ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟು ‘ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ.
ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ.
ಈ ಯೋಜನೆಯಡಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ತ್ವರಿತ ನೇಮಕಾತಿ ಮೂಲಕ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ವಿದ್ಯಾರ್ಥಿಗಳು ಮತ್ತು ಪೋಷಕರ ಇಚ್ಛೆಗೆ ತಕ್ಕಂತೆ ಭಾಷಾ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗುತ್ತದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ವಾರ್ಡ್‌ಗಳಿಂದ ಬರಲು ಉಚಿತ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ.
ಆಧುನಿಕ ಶಿಕ್ಷಣದ ಅಗತ್ಯಗಳಿಗೆ ಅನುಗುಣವಾಗಿ ಪ್ರತಿ ಶಾಲೆಯಲ್ಲೂ ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಿ, ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಕಲೆ ಮತ್ತು ಕ್ರೀಡಾ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡಲಾಗುತ್ತದೆ. ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ನಿರಂತರವಾಗಿ ಪರಿಶೀಲಿಸಲು ಪ್ರತ್ಯೇಕ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಲಾಗುತ್ತದೆ. ಜೊತೆಗೆ, ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು, ಶಾಲಾ ಹಂತದಿಂದಲೇ ವಿದ್ಯಾರ್ಥಿಗಳಿಗೆ ಕೌಶಲಾಧಾರಿತ ತರಬೇತಿಯನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಇತ್ತೀಚಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳ ಉತ್ತಮ ಫಲಿತಾಂಶಗಳನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.
ಎಸ್‌ಎಸ್‌ಎಲ್‌ಸಿಯಲ್ಲಿ 94.1 ಶೇಕಡಾ ಹಾಗೂ ಪಿಯುನಲ್ಲಿ 86.48 ಶೇಕಡಾ ಫಲಿತಾಂಶ ದಾಖಲಿಸಿರುವುದು, ವಿಶೇಷವಾಗಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿದೆ ಎಂದು ಹೇಳಿದ್ದಾರೆ. ಈ ಸಾಧನೆಗಳು ಸರ್ಕಾರದ ಶಿಕ್ಷಣ ವ್ಯವಸ್ಥೆಯ ಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ 2026–27ನೇ ಶೈಕ್ಷಣಿಕ ಸಾಲಿನಿಂದ ಈ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿರುವ ಅವರು, ಈ ಕ್ರಮಗಳಿಂದ 50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲೇ ಅತ್ಯುತ್ತಮ ಸರ್ಕಾರಿ ಶಾಲಾ ವ್ಯವಸ್ಥೆಯನ್ನು ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
ಪೋಷಕರು ಮತ್ತು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶ ಪಡೆದು ಈ ಪರಿವರ್ತನೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



