ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ಫಿಕ್ಸ್! ಆಗಸ್ಟ್ 14ಕ್ಕೆ ರಾಜೀನಾಮೆ ನೀಡೋದಾಗಿ ತಿಳಿಸಿದ ಬಸವರಾಜ ಹೊರಟ್ಟಿ
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಲೀಂ ಅಹ್ಮದ್ ಅವರ ಹೆಸರನ್ನು ಪ್ರಕಟಿಸಿದ ಬೆನ್ನಲ್ಲೇ ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಬೆಂಗಳೂರು: ಡಿಕೆ ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರ ಹೆಸರನ್ನು ಪ್ರಕಟಿಸಿತ್ತು. ಹಾಗಾಗಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಟ್ಟಿ ಅವರನ್ನು ಭೇಟಿಯಾಗಿ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡಲು ಸೂಚಿಸಿದ್ದರು. ಈ ಬೆನ್ನಲ್ಲೇ, ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಸಾಂವಿಧಾನಿಕ ಹುದ್ದೆಗಳನ್ನು ಹೈಜಾಕ್ ಮಾಡಲು ಕಾಂಗ್ರೆಸ್ ಯತ್ನ
ರಾಜೀನಾಮೆಯ ಕುರಿತು ಮಾತನಾಡಿರುವ ಹೊರಟ್ಟಿ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷವು ಸಾಂವಿಧಾನಿಕ ಹುದ್ದೆಯೊಂದನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇದೆ ವೇಳೆ, ಆರಂಭದಲ್ಲಿ ಆಗಸ್ಟ್ 14ನೇ ತಾರೀಖಿನ ಸುಮಾರಿಗೆ ರಾಜೀನಾಮೆ ನೀಡಲು ಬಯಸಿದ್ದೆ, ಆದರೆ ಇಲ್ಲಿಯವರೆಗೆ ನಡೆದಿರುವ ಎಲ್ಲವನ್ನೂ ಮೊದಲು ಸದನದ ಮುಂದೆ ವಿವರಿಸಬೇಕು ಎಂದು ನನಗೆ ಅನ್ನಿಸಿತು. ಆ ನಂತರ ಸದನವು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದ ಹೊರಟ್ಟಿ, ಆಡಳಿತಾರೂಢ ಪಕ್ಷವು ಸಾಂವಿಧಾನಿಕ ಹುದ್ದೆಯಲ್ಲಿ ಹಸ್ತಕ್ಷೇಪ ನಡೆಸುತ್ತಾ, ವಿಧಾನ ಪರಿಷತ್ ಮತ್ತು ವಿಧಾನಸಭೆ ಎರಡನ್ನೂ ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಆಡಳಿತ ಪಕ್ಷವು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಸಭಾಪತಿ ಮತ್ತು ವಿಧಾನಸಭಾ ಸ್ಪೀಕರ್ ಅವರನ್ನು ಆಯ್ಕೆ ಮಾಡುವ ಸಾಂವಿಧಾನಿಕ ಅಧಿಕಾರ ಸದನಕ್ಕೆ ಇದೆ. ಆದಾಗ್ಯೂ, ಯಾರೊಂದಿಗೂ ಸಮಾಲೋಚಿಸದೆ ಅಥವಾ ಅಭಿಪ್ರಾಯ ಕೇಳದೆ, ಅವರು ನೇರವಾಗಿ ಒಂದು ಹೆಸರನ್ನು ಸೂಚಿಸಿದ್ದಾರೆ. ಇದು 110 ರಷ್ಟು ತಪ್ಪು ಮತ್ತು ನನ್ನ ಅಭಿಪ್ರಾಯದಲ್ಲಿ, ಇದು ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.
ಇದಕ್ಕೂ ಮುನ್ನ ಕರ್ನಾಟಕ ಶಾಸಕಾಂಗದ ಪ್ರಮುಖ ಹುದ್ದೆಗಳಾದ, ವಿಧಾನಸಭಾ ಸ್ಪೀಕರ್ ಹುದ್ದೆಗೆ ಜಿ.ಎಸ್. ಪಾಟೀಲ್, ಉಪ ಸ್ಪೀಕರ್ ಹುದ್ದೆಗೆ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಮತ್ತು ವಿಧಾನ ಪರಿಷತ್ ಉಪ ಸಭಾಪತಿ ಹುದ್ದೆಗೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿತ್ತು.
46 ವರ್ಷಗಳಿಗೂ ಹೆಚ್ಚು ಕಾಲ ಪರಿಷತ್ ಸದಸ್ಯ
ಏತನ್ಮಧ್ಯೆ, ಹಾಲಿ ಬಿಜೆಪಿಯಿಂದ ಶಾಸಕರಾಗಿರುವ ಬಸವರಾಜ ಹೊರಟ್ಟಿ ಅವರು 46 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದಾರೆ. ಸದ್ಯ ಕಾಂಗ್ರೆಸ್ ಪಕ್ಷವು ಪರಿಷತ್ತಿನಲ್ಲಿ ಬಹುಮತ ಹೊಂದಿರುವುದರಿಂದ ಈ ಬದಲಾವಣೆಗೆ ಮುಂದಾಗಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



