ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್ ಪಾಯಿಂಟ್ ಸರ್ಚ್; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!
ಕಳೆದ ಮೂರು ದಿನಗಳಿಂದ ಸುಮಾರು 60ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಅದ್ವೈತ್ ಗಾಗಿ ಹುಡುಕಾಟ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

ಬೆಂಗಳೂರು: ಪ್ರಸಿದ್ಧ ಪ್ರವಾಸಿ ತಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ಶುಕ್ರವಾರ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವುದರಿಂದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಶುಕ್ರವಾರ ಬೆಳಗ್ಗೆ ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಬಂದಿದ್ದ ಅದ್ವೈತ್, ಬೆಟ್ಟದ ಪಾರ್ಕಿಂಗ್‌ನಲ್ಲಿ ಬುಲೆಟ್ ಬೈಕ್ ಪಾರ್ಕ್ ಮಾಡಿ ಬೆಟ್ಟ ಏರಿದ ನಂತರ ನಾಪತ್ತೆಯಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಸುಮಾರು 60ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಅದ್ವೈತ್ ಗಾಗಿ ಹುಡುಕಾಟ ನಡೆಸುತ್ತಿದ್ದು, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಮಧ್ಯಪ್ರದೇಶದ ಇಂದೋರ್ ಮೂಲದ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಕೆಲ ಸ್ಫೋಟಕ ವಿಚಾರಗಳು ಹೊರಬರುತ್ತಿದ್ದು, ಇದು ಪೂರ್ವನಿಯೋಜಿತ ಆತ್ಮಹತ್ಯೆ ಎಂಬ ಅನುಮಾನ ವ್ಯಕ್ತವಾಗಿದೆ.
ಪೋಲಿಸರು ಅದ್ವೈತ್ ಅವರ ಕಾಡುಗೋಡಿಯ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಅವರ ಲ್ಯಾಪ್‌ಟಾಪ್ ಪತ್ತೆಯಾಗಿದೆ. ಲ್ಯಾಪ್‌ಟಾಪ್ ತಪಾಸಣೆ ನಡೆಸಿದ ವೇಳೆ ಬೆಚ್ಚಿಬೀಳಿಸುವ ಅಂಶಗಳು ಬೆಳಕಿಗೆ ಬಂದಿವೆ. ಅದ್ವೈತ್ ಕೃತಕ ಬುದ್ಧಿಮತ್ತೆ(AI) ತಂತ್ರಜ್ಞಾನವನ್ನು ಬಳಸಿ ಶಿವಗಂಗೆಯ ಶಾಂತಲಾ ಡ್ರಾಪ್‌ನಿಂದ ಬಿದ್ದರೆ ಎಷ್ಟೊತ್ತಿಗೆ ಸಾಯಬಹುದು ಎಂದು ಹುಡುಕಾಟ ನಡೆಸಿದ್ದರು ಎನ್ನಲಾಗಿದೆ.
ಇದಕ್ಕೆ ಎಐ ಬೆಳಿಗ್ಗೆ 7:30 ಕ್ಕೆ ಬಿದ್ದರೆ ಸಾವು ಸಂಭವಿಸಬಹುದು ಎಂದು ಉತ್ತರ ನೀಡಿತ್ತು. ಈ ಕಾರಣಕ್ಕೆ ಆ.4 ರಂದೇ ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ ಬಳಿಗೆ ಅದ್ವೈತ್ ಬಂದಿರುವ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪೂರ್ವನಿಯೋಜಿತ ಪ್ಲಾನ್ ಪ್ರಕಾರವೇ ಆ.7 ಶುಕ್ರವಾರ ಬೆಳಿಗ್ಗೆ ಶಿವಗಂಗೆಗೆ ಟ್ರಕ್ಕಿಂಗ್ ತೆರಳಿದ್ದ ಅದ್ವೈತ್, ಬೆಟ್ಟ ಹತ್ತುತ್ತಿದ್ದಂತೆ ತಮ್ಮ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿ ಪ್ರಾಪ್ತಿ ಚೌಹಾಣ್‌ಗೆ ಕೊನೆಯದಾಗಿ ಫೋಟೋ ಒಂದನ್ನು ಕಳುಹಿಸಿದ್ದರು. ಅದಾದ ನಂತರ ಅವರ ಮೊಬೈಲ್ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ. ಬೆಟ್ಟದ ತುತ್ತ ತುದಿಯಲ್ಲಿ ಇತರ ಚಾರಣಿಗರು ತೆಗೆದ ಫೋಟೋದಲ್ಲಿ ಅದ್ವೈತ್ ಇರುವುದು ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



