ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಮಂಗಳವಾರ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಅಂದಾಜು ಬರೋಬ್ಬರಿ 16 ಟಿಎಂಸಿ ನೀರನ್ನು ಹರಿಸಬೇಕಾಗಿದೆ.
ಸಿಡಬ್ಲ್ಯೂಆರ್‌ಸಿ ಆದೇಶದ ಕುರಿತು ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ(CWMA) ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.
ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ಬೆಳಗ್ಗೆ ನಡೆದ ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ(MD) ಮಹೇಶ್ ಅವರು ಖುದ್ದಾಗಿ ಹಾಜರಿದ್ದು ರಾಜ್ಯದಲ್ಲಿನ ಜಲಾಶಯಗಳ ನೀರಿನ ಮಟ್ಟ ಹಾಗೂ ವಸ್ತುಸ್ಥಿತಿಯನ್ನು ಪ್ರಾಧಿಕಾರದ ಮುಂದಿಟ್ಟಿದ್ದರು.
ಇನ್ನು ತಮಿಳುನಾಡು ರಾಜ್ಯದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಭವಿಷ್ಯದ ಮಳೆ, ಈಗ ಜಲಾಶಯದಲ್ಲಿರುವ ನೀರಿನ ಸಂಗ್ರಹ ಎಲ್ಲವನ್ನು ಗಮನದಲ್ಲಿಟ್ಟುಕೊಂಡು CWRC ಈ ಶಿಫಾರಸು ಮಾಡಿದೆ.
ಆಗಸ್ಟ್ 10 ವರದಿಯಂತೆ ತಮಿಳುನಾಡು ಗಡಿಯಾದ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಈಗಾಗಲೇ 9 ಟಿಎಂಸಿ ನೀರು ಹರಿದು ಹೋಗಿರುವುದು ದಾಖಲಾಗಿದೆ. CWRC ಹೊಸ ಶಿಫಾರಸಿನಂತೆ ಮುಂದಿನ 15 ದಿನಗಳ ಕಾಲ ದಿನಕ್ಕೆ 12,000 ಕ್ಯೂಸೆಕ್‌ನಂತೆ ನೀರು ಹರಿಸಿದರೆ ತಮಿಳುನಾಡಿಗೆ ಹರಿಯುವ ಒಟ್ಟು ನೀರಿನ ಪ್ರಮಾಣ 16 ಟಿಎಂಸಿಗೆ ತಲುಪಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



