ರಾಜ್ಯ

ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ; 23 ಪ್ರವಾಸಿಗರಿಗೆ ಗಾಯ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್‌ನ ಕಿಟಕಿಗಳ ಗಾಜುಗಳನ್ನು ಒಡೆದು ಒಳಗಿದ್ದ ಪ್ರವಾಸಿಗರನ್ನು ಹೊರತೆಗೆದಿದ್ದಾರೆ.

ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ; 23 ಪ್ರವಾಸಿಗರಿಗೆ ಗಾಯ
ಮಿನಿ ಬಸ್ ಪಲ್ಟಿಯಾಗಿರುವುದು.
Published On :

ಮಡಿಕೇರಿ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ವೊಂದು ನಿಯಂತ್ರಣ ತಪ್ಪಿ, ಕೊಡಗು ಜಿಲ್ಲೆಯ ಕುಮಾರಳ್ಳಿ-ಬಾಚಳ್ಳಿ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ 23 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಕೊಡಗು ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದು ಹಿಂದಿನ ರಾತ್ರಿ ಸಕಲೇಶಪುರದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿತ್ತು. ಮಂಗಳವಾರ ಬೆಳಗ್ಗೆ ಅಲ್ಲಿಂದ ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ವೇಳೆ ಬಚ್ಚಳ್ಳಿ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ಒಟ್ಟು 29 ಪ್ರವಾಸಿಗರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಸ್‌ ಚಾಲಕ ಶಫಿ ಬಸ್ ಮೇಲಿದ್ದ ನಿಯಂತ್ರಣ ಕಳೆದುಕೊಂಡ ಪರಿಣಾಮ ಮಿನಿ ಬಸ್‌ ರಸ್ತೆ ಬದಿಗೆ ಸರಿದು ಪಲ್ಟಿಯಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್‌ನ ಕಿಟಕಿಗಳ ಗಾಜುಗಳನ್ನು ಒಡೆದು ಒಳಗಿದ್ದ ಪ್ರವಾಸಿಗರನ್ನು ಹೊರತೆಗೆದಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ವಾಹನಗಳ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಐದು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿವೆ.

ಸೋಮವಾರಪೇಟೆ ಆಸ್ಪತ್ರೆಯಲ್ಲಿ ಐವರಿಗೆ ಚಿಕಿತ್ಸೆ

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಾ. ಜಮೀರ್‌ ಅಹ್ಮದ್‌ ಹಾಗೂ ವೈದ್ಯಕೀಯ ಸಿಬ್ಬಂದಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಐವರಿಗೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಗಂಭೀರವಾಗಿ ಗಾಯಗೊಂಡಿರುವ ಮೂವರು ಪ್ರಯಾಣಿಕರನ್ನು ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ 16 ಮಂದಿಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.