ಸ್ಪೀಕರ್-ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಜಿ.ಎಸ್ ಪಾಟೀಲ್, ಸಲೀಂ ಅಹ್ಮದ್ ಕಣಕ್ಕೆ!
ಜಿಎಸ್ ಪಾಟೀಲ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಹಾಗೂ ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ಮತ್ತು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಕಾಂಗ್ರೆಸ್ ಸದಸ್ಯ ಸಲೀಂ ಅಹ್ಮದ್ ಅವರು ಗುರುವಾರ (ಆಗಸ್ಟ್ 13) ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯ ಸಚಿವ ಸಂಪುಟದ ಪ್ರಮುಖ ನಾಯಕರ ಸಮ್ಮುಖದಲ್ಲಿ ಇಬ್ಬರೂ ನಾಯಕರು ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಉನ್ನತ ಸ್ಥಾನಗಳಿಗಾಗಿ ಈ ಹಿರಿಯ ಮುಖಂಡರನ್ನು ಆಡಳಿತಾರೂಢ ಕಾಂಗ್ರೆಸ್ ಹೈಕಮಾಂಡ್ ಜಂಟಿಯಾಗಿ ಆಯ್ಕೆ ಮಾಡಿದೆ. ಉಭಯ ಸ್ಥಾನಗಳಿಗೆ ಆಗಸ್ಟ್ 14ರಂದು ಚುನಾವಣೆ ನಡೆಯಲಿದೆ.
ಜಿಎಸ್ ಪಾಟೀಲ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಹಾಗೂ ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು.
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿರುವ ಜಿಎಸ್ ಪಾಟೀಲ್, ಲಿಂಗಾಯತ ಸಮುದಾಯಕ್ಕೆ ಸೇರಿದವರು. ಈ ಹಿಂದೆ ಕರ್ನಾಟಕ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಇನ್ನು ಸಲೀಂ ಅಹ್ಮದ್ ಅವರು ಹುಬ್ಬಳ್ಳಿ-ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇತ್ತೀಚಿನವರೆಗೆ ವಿಧಾನ ಪರಿಷತ್ನ ಸರ್ಕಾರಿ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದರು.
ಈ ಹಿಂದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಕಾರ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1997ರಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು.
ಅವಿರೋಧ ಆಯ್ಕೆಯಾಗುವ ಸಾಧ್ಯತೆ
ವಿಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಜಿಎಸ್ ಪಾಟೀಲ್ ಮತ್ತು ಸಲೀಂ ಅಹ್ಮದ್ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಒಂದು ವೇಳೆ ಚುನಾವಣೆ ನಡೆದರೂ ಎರಡೂ ಸದನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಬಹುಮತ ಇರುವುದರಿಂದ ಗೆಲುವು ನಿರೀಕ್ಷಿಸಲಾಗಿದೆ.
ಜೂನ್ 3ರಂದು ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ವಿಧಾನಸಭೆ ಸ್ಪೀಕರ್ ಹುದ್ದೆ ಖಾಲಿಯಾಗಿತ್ತು.
ಇದೇ ವೇಳೆ, ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನವೂ ಖಾಲಿಯಾಗಿತ್ತು.
ಸದನದಲ್ಲಿ ಕಾಂಗ್ರೆಸ್ಗೆ ಬಹುಮತ ಇರುವುದರಿಂದ ತಮ್ಮ ಅಭ್ಯರ್ಥಿಗೆ ಅವಕಾಶ ಮಾಡಿಕೊಡುವಂತೆ ಆಡಳಿತ ಪಕ್ಷವು ಹೊರಟ್ಟಿಗೆ ಸೂಚಿಸಿತ್ತು. ಇಲ್ಲದಿದ್ದರೆ ಅವಿಶ್ವಾಸ ನಿರ್ಣಯ ಎದುರಿಸಬೇಕಾಗುತ್ತದೆ ಎಂದು ತಿಳಿಸಿತ್ತು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



