ರಾಜ್ಯ

ಹೈಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಭಾರೀ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಜಾ!

ಪ್ರದೋಷ್ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ದರ್ಶನ್ ಆಕ್ಷೇಪಣೆ ಸಲ್ಲಿಸಿದ್ದರು.

ಹೈಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಭಾರೀ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಜಾ!
ನಟ ದರ್ಶನ್ ಮತ್ತು ಹೈಕೋರ್ಟ್
Published On :

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಹೈಕೋರ್ಟ್ ನಲ್ಲೂ ಭಾರೀ ಹಿನ್ನಡೆಯಾಗಿದ್ದು, ಪ್ರಕರಣದ 14ನೇ ಆರೋಪಿ ಪ್ರದೋಷ್ 'ಮಾಫಿ ಸಾಕ್ಷಿ'ಯಾಗುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು, ಪ್ರಕರಣ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ದೊಡ್ಡ ತಿರುವು ಪಡೆದುಕೊಂಡಿದೆ. ಹೀಗಾಗಿ ಜೈಲಿನಲ್ಲಿರುವ ನಟ ದರ್ಶನ್, ಹಾಗೂ ಪವಿತ್ರಾ ಗೌಡ ಅವರಿಗೆ ಭಾರೀ ಟೆನ್ಶನ್ ಶುರುವಾಗಿದೆ.

ಪ್ರದೋಷ್ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ದರ್ಶನ್ ಆಕ್ಷೇಪಣೆ ಸಲ್ಲಿಸಿದ್ದರು. ಆದರೆ ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು 59ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಅವರಿಗೆ ಹಿನ್ನಡೆ ಆಗಿದೆ.

ಪ್ರದೋಷ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ದರ್ಶನ್ ಪರ ವಕೀಲರಾದ ಹಷ್ಮತ್ ಪಾಷಾ ಅವರು ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಇಂದು ವಜಾಗೊಳಿಸಿದೆ.

ವಿನಯ್ ಕುಲಕರ್ಣಿ ಕೇಸ್‌ನಲ್ಲಿ ಈಗಾಗಲೇ ಈ ಅಂಶದ ತೀರ್ಮಾನವಾಗಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂಕೋರ್ಟ್ ಒಪ್ಪಿದೆ. ಹೀಗಾಗಿ 59ನೇ ಸಿಸಿಹೆಚ್ ಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

ಇದೇ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಕೋರ್ಟ್‌ಗೆ ಖುದ್ದು ಹಾಜರಾಗುವ ವಿಚಾರವೂ ವಿಚಾರಣೆಗೆ ಬಂದಿದೆ. ಈ ಬಗ್ಗೆ ಸೋಮವಾರ ಆದೇಶ ನೀಡುವುದಾಗಿ ಕೋರ್ಟ್ ತಿಳಿಸಿದೆ. ಹೀಗಾಗಿ ಸೋಮವಾರ ದರ್ಶನ್ ಖುದ್ದು ಹಾಜರಾಗಬೇಕೇ ಅಥವಾ ಬೇಡವೇ ಎಂಬುದರ ಕುರಿತು ಸ್ಪಷ್ಟತೆ ಸಿಗಲಿದೆ.

ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿ(ಮಾಫಿ ಸಾಕ್ಷಿ)ಯಲ್ಲಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಜಯನಗರದ ಮೈದಾನದಲ್ಲಿ ದರ್ಶನ್ ಪರಿಚಯವಾದ ದಿನದಿಂದ ಹಿಡಿದು ಜೈಲು ಪಾಲಾಗುವವರೆಗಿನ ಇಡೀ ಘಟನಾವಳಿಯನ್ನು ಎಳೆಎಳೆಯಾಗಿ ಸಿಸಿಎಚ್-59 ನ್ಯಾಯಾಧೀಶರ ಮುಂದೆ ಪ್ರದೋಷ್ ಬಿಚ್ಚಿಟ್ಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.