ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ: ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ; Video
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಹಿಳಾ ಶಾಸಕರೂ ಒಳಗೊಂಡಂತೆ ಹಲವು ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಬೆಂಗಳೂರು: ಇತ್ತೀಚೆಗೆ ವಿಸ್ತರಣೆಯಾದ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳಾ ಶಾಸಕರಿಗೆ ಸಚಿವರಿಗೆ ಸ್ಥಾನ ನೀಡದಿರುವುದನ್ನು ಖಂಡಿಸಿ ಬಿಜೆಪಿ ಶಾಸಕರು ಇಂದು ಶುಕ್ರವಾರ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು “ಮಹಿಳಾ ವಿರೋಧಿ” ಎಂದು ಟೀಕಿಸಿದ ಬಿಜೆಪಿ ಶಾಸಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಮಹಿಳಾ ಶಾಸಕರೂ ಒಳಗೊಂಡಂತೆ ಹಲವು ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ವಿಧಾನಸೌಧದ ಆವರಣದ ಪ್ರವೇಶದ್ವಾರದ ಬಳಿಯಿರುವ ನಾಡದೇವಿ ಭುವನೇಶ್ವರಿ ಪ್ರತಿಮೆ ಸಮೀಪ ಬಿಜೆಪಿ ಶಾಸಕರು ಜಮಾಯಿಸಿ, ಬಳಿಕ ವಿಧಾನಸೌಧದತ್ತ ಮೆರವಣಿಗೆ ನಡೆಸಿದರು.
ಮೇ 28ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು 13 ಸಚಿವರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಅಧಿಕಾರ ವಹಿಸಿಕೊಂಡ ಎರಡು ತಿಂಗಳ ಬಳಿಕ, ಆಗಸ್ಟ್ 3ರಂದು ಶಿವಕುಮಾರ್ ಅವರು 19 ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ಸಚಿವ ಸಂಪುಟವನ್ನು ವಿಸ್ತರಿಸಿದರು. ಇದರಿಂದ ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಒಟ್ಟು ಸದಸ್ಯರ ಸಂಖ್ಯೆ 33ಕ್ಕೆ ಏರಿಕೆಯಾಯಿತು.
ಪ್ರಸ್ತುತ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಯಾವುದೇ ಮಹಿಳಾ ಸಚಿವರಿಲ್ಲ. ಇತ್ತೀಚೆಗೆ ಸಂಪುಟಕ್ಕೆ ಸೇರ್ಪಡೆಯಾದ ಸಚಿವರ ಪೈಕಿ ಟಿ. ರಘುಮೂರ್ತಿ ಅವರಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ, ಅಜಯ್ ಸಿಂಗ್ ಅವರಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಶಿವಲಿಂಗೇಗೌಡ ಅವರಿಗೆ ಅಬಕಾರಿ, ವಿಜಯಾನಂದ ಕಾಶಪ್ಪನವರ್ ಅವರಿಗೆ ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳು, ಕೆ.ಎಸ್. ಬಸವಂತಪ್ಪ ಅವರಿಗೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ, ರಿಜ್ವಾನ್ ಅರ್ಷದ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳು ಮತ್ತು ಎಚ್.ಸಿ. ಬಾಲಕೃಷ್ಣ ಅವರಿಗೆ ನಗರಾಡಳಿತ ಖಾತೆಗಳನ್ನು ನೀಡಲಾಗಿದೆ.
ಇತರ ಸಚಿವರ ಪೈಕಿ ಲಕ್ಷ್ಮಣ ಸವದಿ ಅವರಿಗೆ ಸಹಕಾರ, ಬಸವರಾಜ ರಾಯರೆಡ್ಡಿ ಅವರಿಗೆ ಉನ್ನತ ಶಿಕ್ಷಣ, ಪುಟ್ಟರಂಗ ಶೆಟ್ಟಿ ಅವರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಹಾಗೂ ನರೇಂದ್ರ ಸ್ವಾಮಿ ಅವರಿಗೆ ಕೃಷಿ ಖಾತೆಗಳನ್ನು ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



