ಕಸ್ತೂರಿರಂಗನ್ ವರದಿ: ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಕಿಡಿ, ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಮುಂದು..!
ಹಿಂದಿನ ಆರು ಕರಡು ಅಧಿಸೂಚನೆಗಳು ಅವಧಿ ಮುಗಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕರಡು ಅಧಿಸೂಚನೆ ಪ್ರಕಟವಾದ ದಿನದಿಂದ 60 ದಿನಗಳೊಳಗೆ ರಾಜ್ಯ ಸರ್ಕಾರಗಳು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಬೇಕಾಗಿದೆ.

ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಕೆ. ಕಸ್ತೂರಿರಂಗನ್ ವರದಿಯ ಹೊಸ ಕರಡು ಅಧಿಸೂಚನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೇಂದ್ರ ಸರ್ಕಾರ ನೀಡಿರುವ 60 ದಿನಗಳ ಕಾಲಾವಕಾಶದೊಳಗೆ ರಾಜ್ಯದ ಪರವಾಗಿ ಪ್ರಬಲ ಆಕ್ಷೇಪಣಾ ವರದಿಯನ್ನು ಸಲ್ಲಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ ಮತ್ತು ಎಚ್.ಡಿ. ತಮ್ಮಣ್ಣ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಜುಲೈ 27, 2026ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿದೆ ಎಂದು ತಿಳಿಸಿದರು.
ಹಿಂದಿನ ಆರು ಕರಡು ಅಧಿಸೂಚನೆಗಳು ಅವಧಿ ಮುಗಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕರಡು ಅಧಿಸೂಚನೆ ಪ್ರಕಟವಾದ ದಿನದಿಂದ 60 ದಿನಗಳೊಳಗೆ ರಾಜ್ಯ ಸರ್ಕಾರಗಳು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಬೇಕಾಗಿದೆ. ನಮಗೆ ಇನ್ನೂ ಒಂದು ತಿಂಗಳ ಕಾಲಾವಕಾಶವಿದೆ. ಈ ಅವಧಿಯಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಹೇಳಿದರು.
ರೈತರು ಹಾಗೂ ಸಾರ್ವಜನಿಕರಿಗೆ ಉಂಟಾಗಬಹುದಾದ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ವಿರೋಧಿಸುತ್ತಿದೆ. ಕರಡು ಅಧಿಸೂಚನೆಯ ವ್ಯಾಪ್ತಿಯಲ್ಲಿ ರಾಜ್ಯದ 1,000ಕ್ಕೂ ಹೆಚ್ಚು ಗ್ರಾಮಗಳು ಒಳಗೊಂಡಿವೆ ಎಂದು ಹೇಳಿದರು.
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಸೂಚಿಸಲು ಕೇಂದ್ರ ಸರ್ಕಾರ ರಚಿಸಿದ್ದ ಡಾ. ಕೆ. ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯಪಡೆ 2013ರಲ್ಲಿ ತನ್ನ ವರದಿ ಸಲ್ಲಿಸಿತ್ತು. ಆರು ರಾಜ್ಯಗಳಲ್ಲಿ ಒಟ್ಟು ಸುಮಾರು 56,000 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಈ ಪೈಕಿ ಕರ್ನಾಟಕದ 20,668 ಚದರ ಕಿ.ಮೀ. ಪ್ರದೇಶ ಸೇರಿದೆ ಎಂದು ವಿವರಿಸಿದರು.
ಕಸ್ತೂರಿರಂಗನ್ ಸಮಿತಿಯ ವರದಿ ಆಧರಿಸಿ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಈ ಹಿಂದೆ ಕೇಂದ್ರ ಸರ್ಕಾರ ಹಲವು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು. ನಿಗದಿತ ಅವಧಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮೊದಲ ಆರು ಕರಡು ಅಧಿಸೂಚನೆಗಳು ರದ್ದಾದವು. ಇದೀಗ ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆಯನ್ನು ಹೊರಡಿಸಿದೆ ಎಂದು ಹೇಳಿದರು.
ಈ ಅಧಿಸೂಚನೆಯಡಿ ಗಣಿಗಾರಿಕೆ, ಕಲ್ಲುಗಣಿಗಾರಿಕೆ, ಮರಳು ಗಣಿಗಾರಿಕೆ, ಉಷ್ಣ ವಿದ್ಯುತ್ ಸ್ಥಾವರಗಳು ಹಾಗೂ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ನಿರ್ಮಾಣ ಮತ್ತು ಟೌನ್‌ಶಿಪ್ ಅಭಿವೃದ್ಧಿ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಲಾಗುತ್ತದೆ ಎಂದು ತಿಳಿಸಿದರು.
ಹಿಂದಿನ ಕರಡು ಅಧಿಸೂಚನೆಗಳಂತೆ ಈ ಬಾರಿಯೂ ಕರ್ನಾಟಕದ 10 ಜಿಲ್ಲೆಗಳ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಗುರುತಿಸಲಾಗಿದೆ. ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳು ಇದರ ವ್ಯಾಪ್ತಿಗೆ ಬರುತ್ತವೆ.
ಈ ಜಿಲ್ಲೆಗಳ 39 ತಾಲ್ಲೂಕುಗಳ ಒಟ್ಟು 1,449 ಗ್ರಾಮಗಳು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಸೇರಿವೆ ಎಂದು ವಿಧಾನಸಭೆಗೆ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



