KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ರಾಜ್ಯ ಸರ್ಕಾರ ಒಪ್ಪಿಗೆ..!
ತಮ್ಮ ಪುತ್ರಿಗೆ ಸರ್ಕಾರಿ ಉದ್ಯೋಗ ಪಡೆಯಲು ನಕಲಿ ಆದಾಯ ಪ್ರಮಾಣಪತ್ರ ಬಳಸಿದ್ದಾರೆ ಎಂಬ ಆರೋಪ ಸಾಹುಕಾರ್ ವಿರುದ್ಧ ಕೇಳಿಬಂದಿತ್ತು.

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿಂದೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಾಹುಕಾರ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದರು. ಆದರೆ, ಕರ್ನಾಟಕ ಹೈಕೋರ್ಟ್ ಅವರನ್ನು ಮರುನೇಮಕ ಮಾಡುವಂತೆ ಆದೇಶಿಸಿತ್ತು.
ತಮ್ಮ ಪುತ್ರಿಗೆ ಸರ್ಕಾರಿ ಉದ್ಯೋಗ ಪಡೆಯಲು ನಕಲಿ ಆದಾಯ ಪ್ರಮಾಣಪತ್ರ ಬಳಸಿದ್ದಾರೆ ಎಂಬ ಆರೋಪ ಸಾಹುಕಾರ್ ವಿರುದ್ಧ ಕೇಳಿಬಂದಿತ್ತು.
ಈ ಆರೋಪಗಳಿಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇತ್ತೀಚೆಗೆ ಸಾಹುಕಾರ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದರು. ಅವರ ನಿವಾಸ ಮತ್ತು ಕಚೇರಿಯಲ್ಲೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
ಏತನ್ಮಧ್ಯೆ ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಮತ್ತಷ್ಟು ಬಲಪಡಿಸಲು ಹಲವು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಿ ಅಳವಡಿಸುವ ಪ್ರಸ್ತಾವನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜೈಲು ಕೊಠಡಿಯಲ್ಲಿ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ಕಾರಾಗೃಹಗಳ ಭದ್ರತೆಯನ್ನು ಬಲಪಡಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಇದರ ಭಾಗವಾಗಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್ ಸಿಗ್ನಲ್ ಜಾಮರ್‌ಗಳು ಹಾಗೂ ಕೈದಿಗಳ ಕರೆ ವ್ಯವಸ್ಥೆ ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಜೈಲುಗಳಲ್ಲಿ ಅಳವಡಿಸಲು ಸಂಪುಟ ಅನುಮೋದಿಸಿದೆ.
ಇದಲ್ಲದೆ, ಉತ್ತಮ ನಡವಳಿಕೆ ಹೊಂದಿರುವ 28 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಸಂಬಂಧಿಸಿದ ಹಲವು ಸುಧಾರಣಾ ಕ್ರಮಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಕುರಿತು ನಿರ್ದಿಷ್ಟ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



