ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ದುರದೃಷ್ಟವಶಾತ್, ಕರ್ನಾಟಕವು ತಮಿಳುನಾಡಿಗೆ ಪ್ರಮಾಣಾನುಗುಣವಾಗಿ ನೀರು ಹರಿಸುತ್ತಿಲ್ಲ. ಅಲ್ಪ ಪ್ರಮಾಣದ ನೀರು ಮಾತ್ರ ಬಿಡುಗಡೆಯಾಗುತ್ತಿದ್ದು, ತಮಿಳುನಾಡಿಗೆ ಬರಬೇಕಾದಷ್ಟು ನೀರು ಸಿಗುತ್ತಿಲ್ಲ.

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ತಮಿಳುನಾಡು ಪರ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ವಾದ ಮಂಡಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನಗಳನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ದುರದೃಷ್ಟವಶಾತ್, ಕರ್ನಾಟಕವು ತಮಿಳುನಾಡಿಗೆ ಪ್ರಮಾಣಾನುಗುಣವಾಗಿ ನೀರು ಹರಿಸುತ್ತಿಲ್ಲ. ಅಲ್ಪ ಪ್ರಮಾಣದ ನೀರು ಮಾತ್ರ ಬಿಡುಗಡೆಯಾಗುತ್ತಿದ್ದು, ತಮಿಳುನಾಡಿಗೆ ಬರಬೇಕಾದಷ್ಟು ನೀರು ಸಿಗುತ್ತಿಲ್ಲ ಎಂದು ತಿಳಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ರಚನೆ, ಅದರ ಅಧಿಕಾರ, ಕಾರ್ಯಗಳು ಮತ್ತು ಕರ್ತವ್ಯಗಳನ್ನು ಪರಿಗಣಿಸಬೇಕು ಎಂದು ಅವರು ಹೇಳಿದರು. ಪ್ರಾಧಿಕಾರ ನೀಡಿರುವ ನಿರ್ದೇಶನಗಳನ್ನು ಕರ್ನಾಟಕ ಪಾಲಿಸಬೇಕಾಗಿದೆ ಎಂದು ವಾದಿಸಿದರು.
ಕರ್ನಾಟಕ ತನ್ನ ರೈತರಿಗೆ ನೀರು ಹರಿಸುತ್ತಿದೆ. ಆದರೆ, ತಮಿಳುನಾಡಿಗೆ ಮಾತ್ರ ನೀರಿನ ಕೊರತೆಯಿದೆ ಎಂದು ಹೇಳುತ್ತಿದೆ ಎಂದು ವೈದ್ಯನಾಥನ್ ಅವರು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಯಾಗಿ ಕರ್ನಾಟಕ ಪರ ವಕೀಲರು, ರಾಜ್ಯವು ಈಗಾಗಲೇ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ತಿಳಿಸಿದರು. ಜಲಾಶಯಗಳಲ್ಲಿನ ನೀರಿನ ಮಟ್ಟ, ನೀರು ಬಿಡುಗಡೆ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು ನ್ಯಾಯಾಲಯಕ್ಕೆ ವಿವರಿಸಿದರು.
ಎರಡೂ ರಾಜ್ಯಗಳ ವಾದ ಆಲಿಸಿದ ನ್ಯಾಯಪೀಠ, “ಈಗ ಸಮಸ್ಯೆ ಏನಿದೆ? ಸಮಸ್ಯೆ ಇದ್ದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಹೋಗಿ” ಎಂದು ಸೂಚಿಸಿತು. ನಂತರ ಅರ್ಜಿಯ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



