ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್: ಸೈಬರ್ ಖದೀಮರ ಪತ್ತೆಗೆ ಹೋಗಿದ್ದ ಬೆಂಗಳೂರು ಇನ್ಸ್‌ಪೆಕ್ಟರ್ ರವಿ ದುರ್ಮರಣ!
ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸೈಬರ್ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ಸ್‌ಪೆಕ್ಟರ್ ರವಿ ಕೆ.ಬಿ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಸೈಬರ್ ಎಪಿಕೆ ಫೈಲ್ ಫ್ರಾಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಒಟ್ಟು ಒಂಬತ್ತು ಜನರಿದ್ದ ಪೊಲೀಸರ ತಂಡ ಮಧ್ಯಪ್ರದೇಶಕ್ಕೆ ತೆರಳಿತ್ತು.
ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ರವಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಪಿಎಸ್‌ಐ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಈ ಪೈಕಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ನಂತರ ಆರು ಸಿಬ್ಬಂದಿ ಬೆಂಗಳೂರಿಗೆ ವಾಪಸಾಗಿದ್ದರು. ಆದರೆ, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಇನ್ಸ್‌ಪೆಕ್ಟರ್ ರವಿ ಸೇರಿದಂತೆ ಮೂವರು ಸಿಬ್ಬಂದಿ ಮಧ್ಯಪ್ರದೇಶದಲ್ಲೇ ಉಳಿದುಕೊಂಡಿದ್ದರು.
ಮೃತ ಕೆ.ಬಿ. ರವಿ ಅವರು 2005 ಬ್ಯಾಚ್‌ನಲ್ಲಿ ಕಾನ್‌ಸ್ಟೇಬಲ್ ಆಗಿ ಸೇವೆಗೆ ಸೇರಿ, ಬಳಿಕ 2007ರಲ್ಲಿ ಪಿಎಸ್‌ಐ ಆಗಿ ಆಯ್ಕೆಯಾಗಿದ್ದರು. ಈ ಹಿಂದೆ ಬೆಂಗಳೂರಿನ ಅಶೋಕನಗರ, ಇಂದಿರಾನಗರ ಹಾಗೂ ಕೋರಮಂಗಲ ಠಾಣೆಗಳಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. ಘಟನೆಯ ಕುರಿತು ಬೆಂಗಳೂರು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



