KPSC ಪಶುವೈದ್ಯರ ನೇಮಕಾತಿ ಅಕ್ರಮ: ನಾಪತ್ತೆಯಾಗಿದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಪ್ರತ್ಯಕ್ಷ; CID ವಿಚಾರಣೆಗೆ ಹಾಜರು!
ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಶುಕ್ರವಾರ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಐಡಿ ಕಣ್ಣು ತಪ್ಪಿಸಿ ಪರಾರಿಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಶುಕ್ರವಾರ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಜ್ಞಾನೇಂದ್ರ ಅವರು ನಿನ್ನೆಯೇ (ಆ.27) ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ವಿಚಾರಣೆಗೆ ಗೈರಾಗಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.
2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಂದ್ರ ಕುಮಾರ್, ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಪಶುವೈದ್ಯರ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.
ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಬೆಂಗಳೂರಿನ ಜಯಮಹಲ್‌ನಲ್ಲಿರುವ ಅವರ ನಿವಾಸ ಹಾಗೂ ಉತ್ತರ ಪ್ರದೇಶದ ಲಖನೌ ಬಳಿಯ ಸ್ವಗ್ರಾಮದ ಮನೆ ಮೇಲೆಯೂ ದಾಳಿ ನಡೆಸಿದ್ದರು.
ಇಡಿ ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಜ್ಞಾನೇಂದ್ರ ಕುಮಾರ್ ತಮ್ಮ ಮೊಬೈಲ್, ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳೊಂದಿಗೆ ತರಾತುರಿಯಲ್ಲಿ ದೆಹಲಿಗೆ ತೆರಳಿ ಪರಾರಿಯಾಗಿದ್ದರು.
ಇಡಿ ಶೋಧದ ಬಳಿಕ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳು, ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ಮನೆ ಹಾಗೂ ಕಚೇರಿಯ ಬಾಗಿಲಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟಿಸ್ ಅಂಟಿಸಿ ಬಂದಿದ್ದರು. ಸಾಲು ಸಾಲು ಅನುಮಾನಗಳು ಹಾಗೂ ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ, ಕೊನೆಗೂ ಜ್ಞಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ಆಗಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



