ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ವೃದ್ಧ ಮಹಿಳೆ ಮೇಲೆ ಅತ್ಯಾಚಾರ-ಕೊಲೆ, ಆರೋಪಿ ಆತ್ಮಹತ್ಯೆ
ಮನೆಗೆಲಸದವನೇ ಮನೆಯ ಮಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ಬೆಂಗಳೂರು: ನಗರದಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. 65 ವರ್ಷದ ವೃದ್ಧ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.
ಮನೆಗೆಲಸದವನೇ ಮನೆಯ ಮಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ಮೃತ ಮಹಿಳೆಯ 27 ವರ್ಷದ ಪುತ್ರಿ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಿದ್ದು, ಘಟನೆ ಬಗ್ಗೆ ಆಕೆಗೆ ಮಾಹಿತಿ ಇರಲಿಲ್ಲ. ಭಾನುವಾರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಿದ್ದಾರೆ. ವೃದ್ಧೆಯ ಮೇಲೆ ಹತ್ಯೆಗೆ ಮೊದಲು ಅತ್ಯಾಚಾರ ನಡೆದಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ದೇವರಾಜು (50) ತಮಿಳುನಾಡಿನ ಹೊಸೂರು ಮೂಲದವನಾಗಿದ್ದು, ಕಳೆದ ಎಂಟು ವರ್ಷಗಳಿಂದ ಮೃತ ಮಹಿಳೆಯ ಮನೆಯಲ್ಲಿ ಗೃಹಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಾಲೋನಿಯ ಇತರ ಮನೆಗಳಲ್ಲಿಯೂ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ದೇವರಾಜು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ,ಬಳಿಕ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದಾನೆ. ಮೃತ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಅಪರಾಧ ನಡೆದ ಬಳಿಕ ಭಯಗೊಂಡು ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯ ಪತಿ, ಖ್ಯಾತ ಕಂಪನಿಯೊಂದರಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲಸದ ನಿಮಿತ್ತ ವಿದೇಶಕ್ಕೆ ತೆರಳಿದ್ದರು. ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ಮನೆಗೆ ಮರಳಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ಮನೆಯ ಬಾಗಿಲು ತೆರೆಯುತ್ತಿದ್ದಂತೆ ಮಲಗುವ ಕೋಣೆಗೆ ತೆರಳಿದ್ದು, ಅಲ್ಲಿ ದೇವರಾಜು ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಹಾಗೂ ಪತ್ನಿ ನೆಲದಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅವರ ಕಿರುಚಾಟ ಕೇಳಿ ಪುತ್ರಿ ಕೆಳಮಹಡಿಗೆ ಧಾವಿಸಿ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಅತ್ಯಾಚಾರ ನಡೆದಿದೆಯೇ ಎಂಬುದು ವೈದ್ಯಕೀಯ ಹಾಗೂ ಫಾರೆನ್ಸಿಕ್ ವರದಿ ಬಂದ ಬಳಿಕವೇ ಖಚಿತವಾಗಲಿದೆ ಎಂದು ತಿಳಿಸಿದ್ದಾರೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



