ಬೀದರ್: ಮಧ್ಯಾಹ್ನದ ಬಿಸಿಯೂಟ ಸೇವನೆ ನಂತರ 20 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಈ ಘಟನೆ ಔರಾದ್ ತಾಲ್ಲೂಕಿನ ಜಮಾಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೀದರ್: ಜಿಲ್ಲೆಯ ಸರ್ಕಾರಿ ಶಾಲೆಯ ಇಪ್ಪತ್ತು ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದು, ಶಂಕಿತ ವಿಷಾಹಾರ ಸೇವನೆ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಈ ಘಟನೆ ಔರಾದ್ ತಾಲ್ಲೂಕಿನ ಜಮಾಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಅನ್ನ ಸಾಂಬಾರ್ ಮತ್ತು ಇತರ ಪದಾರ್ಥಗಳನ್ನು ಒಳಗೊಂಡ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ, ಕೆಲವು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಕರಿಕೆ ಮತ್ತು ಭೇದಿ ಕಾಣಿಸಿಕೊಂಡಿದೆ. ಅವರಲ್ಲಿ ಕೆಲವರು ವಾಂತಿ ಕೂಡ ಮಾಡಿಕೊಂಡಿದ್ದಾರೆ.
ಆತಂಕ ಹೆಚ್ಚಾದ ಕಾರಣ, ಶಿಕ್ಷಕರು ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಯ ಎಲ್ಲ 58 ವಿದ್ಯಾರ್ಥಿಗಳನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಕೇವಲ 20 ಮಕ್ಕಳಿಗೆ ಮಾತ್ರ ಅನಾರೋಗ್ಯದ ಲಕ್ಷಣಗಳು ಕಂಡುಬಂದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಇಪ್ಪತ್ತು ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಮಧ್ಯಾಹ್ನದ ಊಟ ಸೇವಿಸಿದ ನಂತರ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದೆ. ಇದು ವಿಷಾಹಾರವಾಗಿರುವ ಶಂಕೆ ವ್ಯಕ್ತವಾಗಿದೆ. ಅವರಲ್ಲಿ ಐದರಿಂದ ಆರು ವಿದ್ಯಾರ್ಥಿಗಳು ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಹೆಚ್ಚಿನ ವೀಕ್ಷಣೆಯ ನಂತರ ಅವರನ್ನು ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ಅವರು ಹೇಳಿದರು.
ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿ, ಮಕ್ಕಳು ಸದ್ಯ ಸ್ಥಿರವಾಗಿದ್ದಾರೆ. ಬಡಿಸಲಾದ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



