ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜಾಮೀನು
ವೈದ್ಯಕೀಯ ಕಾರಣ ನೀಡಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೇಳಿದೆ.

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವೈದ್ಯಕೀಯ ಕಾರಣ ನೀಡಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ. ಲಿವರ್ ಕಸಿ ಕುರಿತು ಎರಡು ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂಬ ನಿರ್ದೇಶನ ನೀಡಿ, ಜಾಮೀನು ಮಂಜೂರು ಮಾಡಿದೆ.
ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಅರ್ ದಾಖಲಿಸಿಕೊಂಡಿದ್ದ ಇಡಿ ಸಹ ತನಿಖೆ ಆರಂಭಿಸಿತ್ತು. ಇದೇ ಆಗಸ್ಟ್ 13 ಮತ್ತು 14ರಂದು ಸತೀಶ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ರೂ.13 ಕೋಟಿಯಷ್ಟು ನಗದು ಮತ್ತು ಚಿನ್ನಾಭರಣ ವಶಕ್ಕೆ ಪಡೆದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸೆಪ್ಟೆಂಬರ್ 10 ರಂದು ವಿಚಾರಣೆಗೆ ಹಾಜರಾಗಿದ್ದ ಸತೀಶ್ ಸೈಲ್ ಅವರನ್ನು ಇಡಿ ಬಂಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



