Bedroomನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಕೆ: ಮಹಿಳಾ ಅಧಿಕಾರಿಗೆ Blackmail, ಮೂವರು YouTuber ಗಳ ಬಂಧನ
ಆರೋಪಿಗಳು ತಾವೇ ಪತ್ರಕರ್ತರು ಎಂದು ಹೇಳಿಕೊಂಡು ಮಹಿಳಾ ಅಧಿಕಾರಿಯನ್ನು ಸಂಪರ್ಕಿಸಿದ್ದರು.

ಬೆಳಗಾವಿ: ಖಾಸಗಿ ಜೀವನವನ್ನು ಗುಪ್ತ ಕ್ಯಾಮೆರಾದ ಮೂಲಕ ಚಿತ್ರೀಕರಿಸಿ, 50 ಲಕ್ಷ ರೂ, ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ಮೂವರು ಯೂಟ್ಯೂಬರ್‌ಗಳನ್ನು ಬೆಳಗಾವಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಮೀರ್ ನಿಸಾರ್ ಅಹಮದ್ ಶೇಖ್ (32), ಅಬ್ದುಲ್ ರಶೀದ್ ಮಕಾನದಾರ್ (51) ಮತ್ತು ಮೊಹಮ್ಮದ್ ಬಾಳೇಕುಂದ್ರಿ ಎಂದು ಗುರುತಿಸಲಾಗಿದೆ. ಮೂವರೂ ಗೋಕಾಕ್ ನಿವಾಸಿಗಳಾಗಿದ್ದಾರೆ.
ಆರೋಪಿಗಳು ತಾವೇ ಪತ್ರಕರ್ತರು ಎಂದು ಹೇಳಿಕೊಂಡು ಮಹಿಳಾ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಬಳಿಕ ಆಕೆಯ ಮನೆಗೆ ಪ್ರವೇಶಿಸಿ, ಮಲಗುವ ಕೋಣೆಯಲ್ಲಿನ ಲೈಟ್ ಹೋಲ್ಡರ್‌ಗಳ ಒಳಗೆ ಗುಪ್ತ ಕ್ಯಾಮೆರಾಗಳನ್ನು ಅಳವಡಿಸಿ, ಆಕೆಯ ಖಾಸಗಿ ಕ್ಷಣಗಳನ್ನು ಆಕೆಗೇ ತಿಳಿಯದಂತೆ ಚಿತ್ರೀಕರಿಸಿದ್ದಾರೆಂದು ತಿಳಿದುಬಂದಿದೆ.
ನಂತರ ಆರೋಪಿಗಳು ಆ ಮಹಿಳಾ ಅಧಿಕಾರಿಯನ್ನು ಸಂಪರ್ಕಿಸಿ, ಚಿತ್ರೀಕರಿಸಿದ ವಿಡಿಯೋಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಬೆದರಿಕೆ ಹಾಕಿದ್ದು, 50 ಲಕ್ಷ ರೂ. ಹಣ ನೀಡುವಂತೆ ಬ್ಲ್ಯಾಕ್ ಮೇಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಮಹಿಳಾ ಅಧಿಕಾರಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ, ಸಿಪಿಐ ಬಿ.ಆರ್. ಗಡೇರ್ ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧನದ ವೇಳೆ ಆರೋಪಿಗಳಿಂದ ನಾಲ್ಕು ಮೊಬೈಲ್ ಫೋನ್‌ಗಳು, 64 ಜಿಬಿ ಪೆನ್ ಡ್ರೈವ್, ಆರು ಗುಪ್ತ ಕ್ಯಾಮೆರಾ ಹೋಲ್ಡರ್‌ಗಳು, ಎರಡು ಓಟಿಜಿ ಕನೆಕ್ಟರ್‌ಗಳು, ಎರಡು ಮೆಮೊರಿ ಕಾರ್ಡ್ ರೀಡರ್‌ಗಳು, ಎಂಟು 128 ಜಿಬಿ ಮೆಮೊರಿ ಕಾರ್ಡ್‌ಗಳು ಹಾಗೂ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ರೀತಿಯಲ್ಲಿ ಇನ್ನೂ ಎಷ್ಟು ಜನರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದು ಸೇರಿದಂತೆ, ಈ ಬ್ಲ್ಯಾಕ್‌ಮೇಲ್ ಜಾಲದ ಸಂಪೂರ್ಣ ವ್ಯಾಪ್ತಿಯನ್ನು ಪತ್ತೆಹಚ್ಚಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಈ ಪ್ರಕರಣವನ್ನು “ಗಂಭೀರ ಮತ್ತು ಆತಂಕಕಾರಿ ಬೆಳವಣಿಗೆ” ಎಂದು ವರ್ಣಿಸಿದ್ದು, ಪತ್ರಕರ್ತರ ಹೆಸರನ್ನು ದುರುಪಯೋಗಪಡಿಸಿಕೊಂಡು ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



