5 ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ: ಸತ್ಯ ಒಪ್ಪಿಕೊಂಡ ರಾಜ್ಯ ಸರ್ಕಾರ
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಆದರೂ, ಜನರ ಹಿತದೃಷ್ಟಿಯಿಂದ ಸರ್ಕಾರ ಯೋಜನೆಯನ್ನು ಮುಂದುವರೆಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
‘ಕುಸುಮ ಸಂಜೀವಿನಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಆದರೂ, ಜನರ ಹಿತದೃಷ್ಟಿಯಿಂದ ಸರ್ಕಾರ ಯೋಜನೆಯನ್ನು ಮುಂದುವರೆಸಿದೆ ಎಂದು ಹೇಳಿದ್ದಾರೆ.
ಸಂಕಷ್ಟದ ಸಮಯದಲ್ಲಿ ಜನರು ಮಾನಸಿಕವಾಗಿ ಕುಗ್ಗದಂತೆ, ಕುಟುಂಬಗಳಿಗೆ ಆರ್ಥಿಕ ಭದ್ರತೆ ಸಿಗಲೆಂಬ ಉದ್ದೇಶದಿಂದಲೇ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇವು ಕೇವಲ ಹಣಕಾಸು ನೆರವು ಅಲ್ಲ; ಜನರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುವ ಕ್ರಮವಾಗಿದೆ ಎಂದು ತಿಳಿಸಿದರು.
ಉದ್ಯೋಗ ವಿಚಾರವಾಗಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ನೇಮಕಾತಿಗೆ ಸರ್ಕಾರ ಬದ್ಧವಾಗಿದೆ. ಖಾಲಿ ಹುದ್ದೆಗಳ ಭರ್ತಿ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಿಯಮಿತತೆಗಳಿಂದ ಹಲವು ಹುದ್ದೆಗಳು ಖಾಲಿ ಉಳಿದಿವೆ ಎಂದು ಇದೇ ವೇಳೆ ಆರೋಪಿಸಿದರು.
ಕೆಪಿಎಸ್‌ಸಿ ಸೇರಿದಂತೆ ಸಂಬಂಧಿತ ಸಂಸ್ಥೆಗಳಿಗೆ ನೇಮಕಾತಿ ಜವಾಬ್ದಾರಿ ನೀಡಲಾಗಿದೆ. ಯುವನಿಧಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಯುವಕರಿಗೆ ನೆರವು ನೀಡಲಾಗುತ್ತಿದೆ ಎಂದರು.
ಮೂಲಸೌಕರ್ಯ ಅಭಿವೃದ್ಧಿ ಕುರಿತು ಮಾತನಾಡಿದ ಅವರು, 2027ರೊಳಗೆ ಮೆಟ್ರೋ ಜಾಲವನ್ನು 175 ಕಿ.ಮೀ.ಗೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಡಬಲ್ ಡೆಕ್ಕರ್ ಫ್ಲೈಓವರ್‌ಗಳ ಕುರಿತು ಕೇಂದ್ರ ಸಚಿವಾಲಯದೊಂದಿಗೆ ಚರ್ಚೆ ನಡೆಯುತ್ತಿದೆ. ಹಿಂದಿನ ಟೆಂಡರ್ ಪ್ರಕ್ರಿಯೆಗಳಲ್ಲಿ ಸಮರ್ಪಕ ಹಣಕಾಸು ಯೋಜನೆ ಇಲ್ಲದಿದ್ದ ಕಾರಣ ಗುತ್ತಿಗೆದಾರರಿಗೆ ಬಾಕಿ ಪಾವತಿಗಳ ಸಮಸ್ಯೆ ಉಂಟಾಗಿದೆ. ಪ್ರಸ್ತುತ ಸರ್ಕಾರ ಹಣಕಾಸು ಶಿಸ್ತನ್ನು ಕಾಪಾಡಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಲು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



