ಕೇಂದ್ರದ ವಿರುದ್ಧ ಸಿಡಿದೆದ್ದ ರಾಜ್ಯ ಸರ್ಕಾರ: ಮನ್ರೇಗಾ ಯೋಜನೆ ಮರು ಜಾರಿಗೆ ಆಗ್ರಹ; ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಶೇಷ ಅಧಿವೇಶನ
ಗ್ರಾಮೀಣ ಪ್ರದೇಶಗಳ ದಲಿತರು, ಮಹಿಳೆಯರು ಹಾಗೂ ರೈತರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನೇ ಕಸಿದುಕೊಳ್ಳುವ ಕಾರ್ಯದಲ್ಲಿ ತೊಡಗಿದೆ.

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಗಾ)ಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿರುವ ರಾಜ್ಯಸರ್ಕಾರ, ಈ ನಿಟ್ಟಿನಲ್ಲಿ ನಿರ್ಣಯ ಅಂಗೀಕರಿಸಲು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ನಿರ್ಧರಿಸಿದೆ.
ಬೆಂಗಳೂರು ನಗರದ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಹಾಗೂ ಸಚಿವರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರದಲ್ಲೇ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಹೇಳಿದರು.
ಇದೇ ವೇಳೆ ಡಾ. ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ಬಂದ ಎಂಜಿಎನ್‌ಆರ್‌ಇಗಾ ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ತೆಗೆದುಹಾಕುವುದು ಬಿಜೆಪಿಯ ಸಂಚು ಎಂದು ಆರೋಪಿಸಿದರು.
ಗ್ರಾಮೀಣ ಪ್ರದೇಶಗಳ ದಲಿತರು, ಮಹಿಳೆಯರು ಹಾಗೂ ರೈತರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನೇ ಕಸಿದುಕೊಳ್ಳುವ ಕಾರ್ಯದಲ್ಲಿ ತೊಡಗಿದೆ. ಇದರಿಂದ ಉದ್ಯೋಗದ ಹಕ್ಕು ಅರ್ಥಹೀನವಾಗಿದೆ ಎಂದು ಹೇಳಿದರು.
ಉದ್ಯೋಗದ ಹಕ್ಕು ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಕ್ರಮದಿಂದಾಗಿ 28 ಕೋಟಿ ದಲಿತರಿಗೆ ಅನ್ಯಾಯವಾಗಿದೆ. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ. ಮಹಾತ್ಮಗಾಂಧಿಯ ಹೆಸರು ತೆಗೆದು ಮತ್ತೊಮ್ಮೆ ಗಾಂಧೀಜಿಯನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. ಇವರಿಗೆ ಸರಿಯಾದ ಪಾಠ ಕಲಿಸಬೇಕು ಎಂದು ತಿಳಿಸಿದರು.
‘ನರೇಗಾ ಕಾಯ್ದೆ ಮತ್ತೆ ಜಾರಿಯಾಗವಂತೆ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರನ್ನು, ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನು ತಲುಪಬೇಕು. ಜನರನ್ನು ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕು’ ಎಂದು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



