ಕನ್ನಡಪರ ಸಂಘಟನೆಗಳು, ಹೋರಾಟಗಾರರ ವಿರುದ್ಧದ 52 ಕ್ರಿಮಿನಲ್ ಪ್ರಕರಣ ಹಿಂಪಡೆಯುವ ಆದೇಶ: ಹೈಕೋರ್ಟ್ ತಡೆ
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿತು.

ಬೆಂಗಳೂರು: ಕನ್ನಡಪರ ಸಂಘಟನೆಗಳು, ದಲಿತ ಹೋರಾಟಗಾರರು ಸೇರಿದಂತೆ ವಿವಿಧ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರಿಗೆ ನಿರ್ದೇಶಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿತು.
ಕಳೆದ ಮೇ 27ರಂದು ಹೊರಡಿಸಲಾಗಿದ್ದ ಈ ಸರ್ಕಾರಿ ಆದೇಶವು, 2024ರಲ್ಲಿ ಸರ್ಕಾರ ಹೊರಡಿಸಿದ್ದ ಇದೇ ರೀತಿಯ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್‌ನ ಹಿಂದಿನ ತೀರ್ಪಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ ಹಿನ್ನೆಲೆಯಲ್ಲಿ ಪೀಠ ಮಧ್ಯಂತರ ತಡೆ ನೀಡಿತು.
ವಿಚಾರಣೆ ವೇಳೆ, ನ್ಯಾಯಾಲಯದ ಮುಂದೆ ಎತ್ತಲಾಗಿರುವ ಪ್ರಶ್ನೆಗೆ ಉತ್ತರ ನೀಡುವವರೆಗೆ ಮತ್ತು ನಾವು ಅಂತಿಮ ತೀರ್ಮಾನ ಕೈಗೊಳ್ಳುವವರೆಗೆ ಈ ಆದೇಶವನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಪೀಠವು ಮೌಖಿಕವಾಗಿ ರಾಜ್ಯ ಸರ್ಕಾರಕ್ಕೆ ತಿಳಿಸಿತು.
ರಾಜ್ಯ ಸರ್ಕಾರವು ಎರಡು ವಾರಗಳೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನ್ಯಾಯಾಲಯ ನಿರ್ದೇಶಿಸಿತು. ರಾಜ್ಯ ಸರ್ಕಾರ ಹಿಂಪಡೆಯಲು ಸೂಚಿಸಿದ್ದ 52 ಪ್ರಕರಣಗಳಲ್ಲಿ, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಲಾಡ್ಲೆ ಮುಷ್ತಾಕ್ ದರ್ಗಾದಲ್ಲಿ 2022ರಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ಏಳು ಪ್ರಕರಣಗಳೂ ಸೇರಿವೆ.
ಅರ್ಜಿದಾರರ ಪ್ರಕಾರ, ಈ ಸರ್ಕಾರಿ ಆದೇಶವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 360ಕ್ಕೆ ವಿರುದ್ಧವಾಗಿದೆ. ಪ್ರಕರಣಗಳನ್ನು ಹಿಂಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕಲ್ಲ, ಸರ್ಕಾರಿ ಅಭಿಯೋಜಕರಿಗೆ ಮಾತ್ರ ಇದೆ ಎಂದು ವಾದಿಸಿದರು.
ಇಂತಹ ಕ್ರಮಗಳು ನ್ಯಾಯಾಂಗ ವ್ಯವಸ್ಥೆಯ ಪಾವಿತ್ರ್ಯಕ್ಕೆ ಧಕ್ಕೆ ಉಂಟುಮಾಡುವುದರ ಜೊತೆಗೆ, ನ್ಯಾಯಾಂಗ ಪ್ರಕ್ರಿಯೆಯಲ್ಲಿನ ನ್ಯಾಯಸಮ್ಮತತೆ ಮತ್ತು ಹೊಣೆಗಾರಿಕೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ ಎಂದೂ ಅರ್ಜಿದಾರರು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 2024ರ ಅಕ್ಟೋಬರ್ 15ರಂದು ಇದೇ ರೀತಿಯ ಆದೇಶ ಹೊರಡಿಸಿ, 2022ರ ಹುಬ್ಬಳ್ಳಿ ಗಲಭೆ ಪ್ರಕರಣಗಳು ಸೇರಿದಂತೆ 43 ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿತ್ತು. ಆ ಗಲಭೆಯಲ್ಲಿ ಇಸ್ಲಾಂ ಧರ್ಮದ ಕುರಿತು ಅವಹೇಳನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್ ಮಾಡಿದ್ದಾನೆ ಎನ್ನಲಾದ ವ್ಯಕ್ತಿಯನ್ನು ಒಪ್ಪಿಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


