ಕರ್ನಾಟಕದಲ್ಲಿ ಜುಲೈ 10ರವರೆಗೆ ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್: IMD
ಐಎಂಡಿ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಹಾಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ.

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದ್ದು, ಜುಲೈ 10ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರಿ ಮಳೆ, ದಕ್ಷಿಣ ಒಳನಾಡು ಮತ್ತಯ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 5 ರಿಂದ 8 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಐಎಂಡಿ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಹಾಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ.
ತಗ್ಗು ಪ್ರದೇಶಗಳು ಹಾಗೂ ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಇದೇ ವೇಳೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ನಿರಂತರ ಮಳೆಯಿಂದ ನಗರ ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ, ತಗ್ಗು ಪ್ರದೇಶಗಳಲ್ಲಿ ಆಕಸ್ಮಿಕ ಪ್ರವಾಹ, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಹಾಗೂ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮುನ್ಸೂಚನೆ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸೂಚಿಸಿದೆ.
ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ರಕ್ಷಣಾ ಸಿಬ್ಬಂದಿ ಮತ್ತು ತುರ್ತು ಸೇವಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸುವಂತೆ, ಭಾರೀ ಮಳೆಯ ಸಂದರ್ಭಗಳಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಐಎಂಡಿ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



