ಕನ್ನಡ ಶಿಕ್ಷಕರಿಗೆ ಮರಾಠಿಯಲ್ಲಿ TET: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡಿಗರ ಕಿಡಿ
ಕರ್ನಾಟಕದಲ್ಲಿ ಮರಾಠಿ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯನ್ನು ಮರಾಠಿ ಭಾಷೆಯಲ್ಲೇ ಬರೆಯಲು ಅವಕಾಶ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಮಹಾರಾಷ್ಟ್ರ ಸರ್ಕಾರವೂ ಅನುಸರಿಸಬೇಕಿತ್ತು.

ಹುಬ್ಬಳ್ಳಿ: ಕನ್ನಡ ಮಾಧ್ಯಮದ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ (TET)ಯನ್ನು ಮರಾಠಿ ಭಾಷೆಯಲ್ಲೇ ಬರೆಯುವುದನ್ನು ಕಡ್ಡಾಯಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ (ಕೆವಿಎಸ್) ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (NCTE) ನಿಯಮಗಳಿಗೆ ವಿರುದ್ಧವಾಗಿದ್ದು, ಗಡಿ ಭಾಗಗಳಲ್ಲಿ ಕನ್ನಡ ಶಿಕ್ಷಣವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಸಂಘ ಆರೋಪಿಸಿದೆ.
ಈ ಕುರಿತು ವಿಶೇಷ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಿರುವ ಕರ್ನಾಟಕ ವಿದ್ಯಾವರ್ಧಕ ಸಂಘ, ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು "ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾದದ್ದು" ಹಾಗೂ ಕನ್ನಡ ಭಾಷಿಕ ಶಿಕ್ಷಕರ ವಿರುದ್ಧದ ತಾರತಮ್ಯ ಎಂದು ಖಂಡಿಸಿದೆ.
ಸಂಘದ ಪ್ರಕಾರ, ಕರ್ನಾಟಕದಲ್ಲಿ ಮರಾಠಿ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯನ್ನು ಮರಾಠಿ ಭಾಷೆಯಲ್ಲೇ ಬರೆಯಲು ಅವಕಾಶ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಮಹಾರಾಷ್ಟ್ರ ಸರ್ಕಾರವೂ ಅನುಸರಿಸಬೇಕಿತ್ತು. ಆದರೆ, ಕನ್ನಡ ಶಿಕ್ಷಕರಿಗೆ ಮರಾಠಿಯಲ್ಲಿ ಪರೀಕ್ಷೆ ಬರೆಯುವುದನ್ನು ಕಡ್ಡಾಯಗೊಳಿಸಿರುವುದು ಕನ್ನಡ ಭಾಷೆ ಮತ್ತು ಶಿಕ್ಷಣವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಸಂಘ ಆರೋಪಿಸಿದೆ.
ಈ ವಿಷಯವಾಗಿ ಕರ್ನಾಟಕ ಸರ್ಕಾರ ಈಗಾಗಲೇ ಮಹಾರಾಷ್ಟ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ಅದನ್ನು ಮಹಾರಾಷ್ಟ್ರ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಮಹಾರಾಷ್ಟ್ರ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯದಿದ್ದರೆ ಗಡಿ ಭಾಗದ ಕನ್ನಡಿಗರು ತೀವ್ರ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.
ಜತೆಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಷಯವನ್ನು ತಕ್ಷಣ ಮಹಾರಾಷ್ಟ್ರ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಕನ್ನಡ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದೆ.
ಇದಲ್ಲದೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಮಧ್ಯಪ್ರವೇಶ ಮಾಡುವಂತೆ ಕರ್ನಾಟಕ ವಿದ್ಯಾವರ್ಧಕ ಸಂಘದ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



