ಶಿವಮೊಗ್ಗ ರೈತರಿಗೆ ಆಘಾತ: ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲು; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ..!
ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿರುವ ರೈತರಿಗೆ ಈ ನಿರ್ಧಾರದಿಂದ ತೊಂದರೆಯಾಗಲಿದೆ ಎಂಬುದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದು, ನೀರಾವರಿ ಉದ್ದೇಶಕ್ಕೆ ನೀರು ಬಿಡುಗಡೆ ಕಡಿಮೆಯಾಗುವುದರಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು: ಈ ವರ್ಷ ಮುಂಗಾರು ಮಳೆ ಕೊರತೆಯಿಂದ ಭದ್ರಾ ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಡಳಿತ ಲಕ್ಕವಳ್ಳಿ ಭದ್ರಾ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲಿಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬೆಳವಣಿಗೆ ಕೃಷಿಗಾಗಿ ನೀರಿನ ನಿರೀಕ್ಷೆಯಲ್ಲಿದ್ದ ಸಾವಿರಾರು ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ.
ಜಲಸಂಪನ್ಮೂಲ ಇಲಾಖೆ ಹಾಗೂ ಮೈಸೂರು ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಆದೇಶ ಹೊರಡಿಸಿದ್ದು, ಲಭ್ಯವಿರುವ ನೀರಿಗೆ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ಮುಂದಿನ ದಿನಗಳಲ್ಲೂ ಮಳೆ ಕೊರತೆ ಮುಂದುವರಿದರೆ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿರುವ ರೈತರಿಗೆ ಈ ನಿರ್ಧಾರದಿಂದ ತೊಂದರೆಯಾಗಲಿದೆ ಎಂಬುದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದು, ನೀರಾವರಿ ಉದ್ದೇಶಕ್ಕೆ ನೀರು ಬಿಡುಗಡೆ ಕಡಿಮೆಯಾಗುವುದರಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಈ ನಿರ್ಧಾರದಿಂದ ಕೃಷಿಯ ನೀರು ಬಿಡುಗಡೆಯ ಮೇಲೆ ಪರಿಣಾಮ ಬೀರಲಿದ್ದು, ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಬಹುದು. ಆದರೆ, ಬರ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಿರುವ ನೀರನ್ನು ಸಂರಕ್ಷಿಸುವುದು ಅತ್ಯಗತ್ಯ" ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
186 ಅಡಿ ಗರಿಷ್ಠ ನೀರಿನ ಮಟ್ಟ ಹಾಗೂ 71.535 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಜುಲೈ 10ರ ವೇಳೆಗೆ ಕೇವಲ 146 ಅಡಿ ನೀರಿನ ಮಟ್ಟ ಮಾತ್ರ ದಾಖಲಾಗಿದ್ದು, ಒಟ್ಟು 31.257 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ.
ಕಳೆದ ವರ್ಷದ ಇದೇ ಅವಧಿಯಲ್ಲಿ ಜಲಾಶಯದ ನೀರಿನ ಮಟ್ಟ 173.7 ಅಡಿ ಇದ್ದು, 56.794 ಟಿಎಂಸಿ ನೀರು ಸಂಗ್ರಹವಾಗಿತ್ತು. ಈ ವರ್ಷದೊಂದಿಗೆ ಹೋಲಿಸಿದರೆ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ ಕಂಡುಬಂದಿದೆ.
ಪ್ರಸ್ತುತ ಜಲಾಶಯಕ್ಕೆ 13,123 ಕ್ಯೂಸೆಕ್ ನೀರು ಹರಿದು ಬರುತ್ತಿದ್ದರೂ, ನೀರನ್ನು ಸಂರಕ್ಷಿಸುವ ಉದ್ದೇಶದಿಂದ ಹೊರಹರಿವನ್ನು ಕೇವಲ 218 ಕ್ಯೂಸೆಕ್‌ಗೆ ಸೀಮಿತಗೊಳಿಸಲಾಗಿದೆ.
ಇದರಲ್ಲಿ ಎಡದಂಡೆ ಕಾಲುವೆಗೆ 50 ಕ್ಯೂಸೆಕ್, ಬಲದಂಡೆ ಕಾಲುವೆಗೆ 10 ಕ್ಯೂಸೆಕ್ ನೀರನ್ನು ಮಾತ್ರ ಬಿಡುಗಡೆ ಮಾಡಲಾಗುತ್ತಿದ್ದು, ಸುಮಾರು 6 ಕ್ಯೂಸೆಕ್ ನೀರು ಆವಿಯಾಗುತ್ತಿದೆ.
ಮಳೆ ಕೊರತೆಯಿಂದ ಭದ್ರಾ ಜಲಾಶಯದ ನೀರಿನ ಮಟ್ಟ ನಿರೀಕ್ಷಿತ ಪ್ರಮಾಣದಲ್ಲಿ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಾವರಿ ಮತ್ತು ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



