'Bharat Jodo ಯುವ ಸಂಘ' ಸ್ಥಾಪನೆಗೆ ಅನುದಾನ: 'ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ಸಿಗರಿಗೆ ಗಂಜಿ ಕೇಂದ್ರಗಳ ಸ್ಥಾಪನೆ'
ಈ ಹಿಂದೆ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಈಗ 'ಸಾಂವಿಧಾನಿಕ ಮೌಲ್ಯಗಳು' ಹಾಗೂ 'ಸಾಮಾಜಿಕ ಸೌಹಾರ್ದತೆ' ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಾಗಿ ಬಳಸಲಾಗುತ್ತಿದೆ.

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ "ಭಾರತ್ ಜೋಡೋ ಯುವ ಸಂಘ"ಗಳ ಸ್ಥಾಪನೆ ಯೋಜನೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮೋದನೆ ನೀಡಿರುವುದನ್ನು ತೀವ್ರವಾಗಿ ವಿರೋಧಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, "ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಪಕ್ಷದ ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ ಮಾಡಲಾಗುತ್ತಿದೆ" ಎಂದು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, "ಕಾಂಗ್ರೆಸ್ ಸರ್ಕಾರ ನಾಚಿಕೆಯಿಲ್ಲ, ಈ ನಿಟ್ಟಿನಲ್ಲಿ ಎಲ್ಲಾ ಮಿತಿ ಮೀರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸಾರ್ವಜನಿಕ ಹಣವನ್ನು ನಿರ್ಲಜ್ಜವಾಗಿ ದುರ್ಬಳಕೆ ಮಾಡುತ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಈಗ 'ಸಾಂವಿಧಾನಿಕ ಮೌಲ್ಯಗಳು' ಹಾಗೂ 'ಸಾಮಾಜಿಕ ಸೌಹಾರ್ದತೆ' ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಖಜಾನೆ ಕಾಂಗ್ರೆಸ್ ಪಕ್ಷದ ಚುನಾವಣಾ ನಿಧಿಯಲ್ಲ. ಅದು ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಹುಲ್ ಗಾಂಧಿ ಅವರ ವೈಯಕ್ತಿಕ ಹಣವೂ ಅಲ್ಲ. ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಮಹತ್ವಾಕಾಂಕ್ಷೆ ಈಡೇರಿಸುವ ಹೂಡಿಕೆ ನಿಧಿಯೂ ಅಲ್ಲ ಎಂದು ಕಿಡಿಕಾರಿದ್ದಾರೆ.
ಸರ್ಕಾರ ಸಾರ್ವಜನಿಕ ಹಣದಿಂದ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘಟಿಸುವ ಕೆಲಸದಲ್ಲಿ ತೊಡಗಿದೆ, ರಾಜ್ಯದಲ್ಲಿ ರೈತರು ಸಮರ್ಪಕ ನೆರವಿಲ್ಲದೆ ಸಂಕಷ್ಟದಲ್ಲಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳು ಹದಗೆಟ್ಟಿವೆ. ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಆದರೆ, ಸರ್ಕಾರ ಯಶಸ್ವಿಯಾಗಿ ಅಭಿವೃದ್ಧಿಪಡಿಸುತ್ತಿರುವುದು ರಾಜಕೀಯ ನಿಷ್ಠಾವಂತರ ಜಾಲವಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.
"ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ' ಅಭಿಯಾನವನ್ನು ಉಳಿಸಬೇಕಾದರೆ ಕಾಂಗ್ರೆಸ್ ಪಕ್ಷವೇ ತನ್ನ ಹಣದಿಂದ ನಡೆಸಲಿ. ಕರ್ನಾಟಕದ ಜನರ ತೆರಿಗೆ ಹಣವನ್ನು ದೆಹಲಿಯ ನಾಯಕರ ರಾಜಕೀಯ ಉಳಿವಿಗಾಗಿ ಬಳಸಬಾರದು" ಎಂದು ಆಗ್ರಹಿಸಿದ್ದಾರೆ.
ರಾಜ್ಯದ ಜನರಿಗೆ ಉತ್ತಮ ಆಡಳಿತ ಬೇಕೇ ಹೊರತು, ರಾಜ್ಯದ ಖಜಾನೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಒಪ್ಪಿಸುವ ಆಡಳಿತ ಬೇಡ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ನಡೆಸಲು ಹಾಗೂ ತನ್ನ ಕಾರ್ಯಕರ್ತರನ್ನು ತೃಪ್ತಿಪಡಿಸಲು ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುವುದು ಖಂಡನೀಯ. ದೇಶವನ್ನು ವಿಭಜಿಸುವ ರಾಜಕಾರಣ ಮಾಡಿದವರೇ ಇಂದು 'ಭಾರತ್ ಜೋಡೋ' ಹೆಸರಿನಲ್ಲಿ ಸಮಿತಿಗಳನ್ನು ರಚಿಸಿ ಸಾರ್ವಜನಿಕ ಹಣವನ್ನು ಪೋಲು ಮಾಡುತ್ತಿದ್ದಾರೆ.
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಗಳ ಕೊರತೆ ಇರುವ ಸಂದರ್ಭದಲ್ಲೇ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಸಮಿತಿಗಳ ಹೆಸರಿನಲ್ಲಿ ಸರ್ಕಾರಿ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ತಲುಪಿಸಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಿ ಸಂಪನ್ಮೂಲಗಳನ್ನು ದುರ್ಬಳಕೆ ಮಾಡುತ್ತಿರುವ ಈ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



