ಧರ್ಮಸ್ಥಳ ಬುರಡೆ ಪ್ರಕರಣ: ಕೊನೆಗೂ ಬೆಳ್ತಂಗಡಿ ನ್ಯಾಯಾಲಯಕ್ಕೆ 7000 ಪುಟಗಳ ಅಂತಿಮ ವರದಿ ಸಲ್ಲಿಸಿದ SIT
ಧರ್ಮಸ್ಥಳ ಬುರಡೆ ಪ್ರಕರಣ: ಕೊನೆಗೂ ಬೆಳ್ತಂಗಡಿ ನ್ಯಾಯಾಲಯಕ್ಕೆ 7000 ಪುಟಗಳ ಅಂತಿಮ ವರದಿ ಸಲ್ಲಿಸಿದ SIT

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ 'ಬಹು ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿ' ಆರೋಪಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದೆ. 3,082 ಪುಟಗಳನ್ನು ಒಳಗೊಂಡಿರುವ ವರದಿಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ 12 ಪ್ರತ್ಯೇಕ ಕಡತಗಳಲ್ಲಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಿಂದಿನ 3,923 ಪುಟಗಳ ವರದಿಯ ಜೊತೆಗೆ, ಒಟ್ಟು ತನಿಖಾ ದಾಖಲೆಗಳು ಈಗ 7,005 ಪುಟಗಳಾಗಿವೆ.
ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅಂತಿಮ ವರದಿಯ ವಿಷಯಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು. ಅದು ನ್ಯಾಯಾಂಗ ದಾಖಲೆಯಾಗಿದೆ ಮತ್ತು ನ್ಯಾಯಾಲಯವು ಮಾತ್ರ ಅದನ್ನು ಪರಿಶೀಲಿಸುತ್ತದೆ ಎಂದು ಹೇಳಿದರು. ವಿಶೇಷ ತನಿಖಾ ತಂಡದ ಪೊಲೀಸ್ ವರಿಷ್ಠಾಧಿಕಾರಿ ಸಿಎ ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಇನ್ಸ್‌ಪೆಕ್ಟರ್ ಮಂಜುನಾಥ್ ಮತ್ತು ತನಿಖಾ ತಂಡದ ಇತರ ಸದಸ್ಯರು ಸಲ್ಲಿಕೆಯ ಸಮಯದಲ್ಲಿ ನ್ಯಾಯಾಲಯದಲ್ಲಿ ಹಾಜರಿದ್ದರು.
ಇದಕ್ಕೂ ಮೊದಲು 2025ರ ನವೆಂಬರ್ 20ರಂದು ಎಸ್‌ಐಟಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 215ರ ಅಡಿಯಲ್ಲಿ ಸಿ ಎನ್ ಚಿನ್ನಯ್ಯ (ದೂರುದಾರ) ಮತ್ತು ಪ್ರಕರಣದಲ್ಲಿ ದೂರುದಾರರನ್ನು ಬೆಂಬಲಿಸಿದ ಬುರುಡೆ ಗ್ಯಾಂಗ್ ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ ಮತ್ತು ಸುಜಾತಾ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿತ್ತು. ನ್ಯಾಯಾಲಯವು ನಂತರ ಅಂತಿಮ ವರದಿಯನ್ನು ಸಲ್ಲಿಸಲು ಎಸ್‌ಐಟಿಗೆ ಸೂಚಿಸಿತು.
2025ರ ಜುಲೈನಲ್ಲಿ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣವು ಆರಂಭವಾಗಿತ್ತು. ಮಾಜಿ ಕೆಲಸಗಾರ ಚಿನ್ನಯ್ಯ ಧರ್ಮಸ್ಥಳ ಸುತ್ತಮುತ್ತಲ ಕಾಡುಗಳಲ್ಲಿ 100ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳ ಮೃತದೇಹವನ್ನು ಅಕ್ರಮವಾಗಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದು ರಾಜ್ಯಾಧ್ಯಂತ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿತ್ತು. ಬಳಿಕ ಬುರುಡೆ ರಹಸ್ಯವನ್ನು ಪತ್ತೆ ಮಾಡಲು ರಾಜ್ಯ ಸರ್ಕಾರ ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ತಂಡವನ್ನು ರಚನೆ ಮಾಡಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ 7 ಸಾವಿರ ಪುಟಗಳ ಅಂತಿಮ ವರದಿಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



