'ಬಿಡದಿ ಟೌನ್ ಶಿಪ್' ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ!
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಬೆಂಗಳೂರು: ಬಿಡದಿ ಬಳಿಯ ಉದ್ದೇಶಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಲು ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಿಂದ ಬಿಡದಿಯವರೆಗೆ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.
ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಇದನ್ನು ಘೋಷಿಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
'ಸ್ಯಾಟಲೈಟ್ ಟೌನ್‌ಶಿಪ್' ಅಭಿವೃದ್ಧಿಯ ನೆಪದಲ್ಲಿ ರಾಜ್ಯ ಸರ್ಕಾರ ಬಿಡದಿಯಲ್ಲಿರುವ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಈ ಯೋಜನೆಯು ಕೇವಲ ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ದೂರಿದರು.
ರಾಜ್ಯ ಸರ್ಕಾರದಿಂದ ರೈತ ಪರವಾದ ಯಾವುದೇ ನಿರ್ಧಾರವನ್ನು ನಾವು ಕಾಣುತ್ತಿಲ್ಲ. ಸರ್ಕಾರ ಭೂಸ್ವಾಧೀನ ಅಧಿಸೂಚನೆಯನ್ನು ಹೊರಡಿಸುತ್ತದೆ. ನಂತರ ಯೋಜನೆಯ ಸಾಧಕ-ಬಾಧಕಗಳನ್ನು ಪರಿಶೀಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುತ್ತಾರೆ. ಇವೆಲ್ಲವೂ ಕೇವಲ ನಾಟಕ ಎಂದು ಅವರು ಹೇಳಿದರು.
"ರೈತರ ಪರವಾಗಿ ಧ್ವನಿ ಎತ್ತಲು ಬಿಜೆಪಿ ನಿರ್ಧರಿಸಿದ್ದು, ನಾವು ಅವರೊಂದಿಗೆ ಕೈಜೋಡಿಸುತ್ತೇವೆ. ನಾವು ಪಾದಯಾತ್ರೆಯನ್ನು ನಡೆಸಲಿದ್ದು, ಪಕ್ಷದ ನಾಯಕರೊಂದಿಗೆ ಚರ್ಚಿಸಿದ ನಂತರ ಶೀಘ್ರದಲ್ಲೇ ದಿನಾಂಕಗಳನ್ನು ಪ್ರಕಟಿಸುತ್ತೇವೆ ಎಂದು ಹೇಳಿದ ಅವರು, ವಿಧಾನಮಂಡಲದ ಅಧಿವೇಶನ ಆರಂಭವಾಗುವ ಮುನ್ನವೇ ಈ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರದಲ್ಲಿ ಸ್ಥಾಪಿಸುವ ಯೋಜನೆಯನ್ನು ಕೈಬಿಡುವಂತೆಯೂ ವಿಜಯೇಂದ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಅಲ್ಲಿನ ಭೂಮಿಯ ಮೌಲ್ಯವನ್ನು ಹೆಚ್ಚಿಸಲು ಅಥವಾ ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಬದಲಾಗಿ, ತುಮಕೂರು ಬಳಿ ಇದನ್ನು ಸ್ಥಾಪಿಸಿ, ಇದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ರಾಜ್ಯವ್ಯಾಪಿ ಪ್ರತಿಭಟನೆ ಆರಂಭವಾಗುವ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡದಿ ಟೌನ್‌ಶಿಪ್ ಪ್ರಸ್ತಾವನೆಯನ್ನು ಹಿಂಪಡೆಯಬೇಕು,ಅಲ್ಲದೆ, ಬಿಡದಿ ಟೌನ್‌ಶಿಪ್ ಮತ್ತು ಕನಕಪುರ ವಿಮಾನ ನಿಲ್ದಾಣದ ಪ್ರಸ್ತಾವನೆಗಳಿಗಾಗಿ ಹೆಚ್ಚು ಸಮಯ ವ್ಯಯಿಸುವ ಬದಲು, ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು, ಅದರಲ್ಲೂ ವಿಶೇಷವಾಗಿ ನೀರಾವರಿ ಯೋಜನೆಗಳತ್ತ ಗಮನಹರಿಸಲು ಆ ಸಮಯದ ಕನಿಷ್ಠ ಶೇ. 20ರಷ್ಟನ್ನಾದರೂ ಮೀಸಲಿಡಬೇಕು ಎಂದು ವಿಜಯೇಂದ್ರ ಹೇಳಿದರು.
ಬರಗಾಲದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬರೆದ ಪತ್ರದ ಬಗ್ಗೆ ಪ್ರಸ್ತಾಪಿಸಿದ ವಿಜಯೇಂದ್ರ, ಕೇವಲ ಪತ್ರ ಬರೆಯುವುದರಿಂದ ರೈತರ ಸಮಸ್ಯೆಗಳು ಬಗೆಹರಿಯುವುದಿಲ್ಲ. ರೈತರು ತಮ್ಮ ಜಮೀನಿನಲ್ಲಿ ಬೆಳೆ ಬೆಳೆಯದಂತೆ ಸಲಹೆ ನೀಡಿದ್ದಕ್ಕಾಗಿ ಮುಖ್ಯಮಂತ್ರಿಯನ್ನು ಟೀಕಿಸಿದ ಅವರು, ಸಂಕಷ್ಟಕ್ಕೀಡಾದ ರೈತರಿಗೆ ಪರಿಹಾರ ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಬಿಡದಿಯಲ್ಲಿ ಪ್ರತಿಭಟನೆ ನಡೆಸಿದ ರೈತರು ಮತ್ತು ಮಹಿಳೆಯರ ವಿರುದ್ಧ ದಾಖಲಿಸಲಾಗಿರುವ ಸುಳ್ಳು ಪ್ರಕರಣಗಳನ್ನು ಮುಂದಿನ 24 ಗಂಟೆಗಳ ಒಳಗೆ ಹಿಂಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಭ್ರಷ್ಟ ಮತ್ತು ರೈತ ವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ ಹೋರಾಡಲು ಸಿದ್ಧವಾಗಿವೆ. ಜನಹಿತವನ್ನು ಮರೆತಿರುವ ಈ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಇವರು 'ತುಘಲಕ್ ದರ್ಬಾರ್' ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


