ರಾಜ್ಯ

ಅನ್ನಭಾಗ್ಯ ಅಕ್ಕಿ ಹಗರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ..!

ತನಿಖೆಯ ವೇಳೆ ಬೆಳಕಿಗೆ ಬಂದಿರುವ ಪ್ರಾಥಮಿಕ ಅಕ್ರಮಗಳು, ಅವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಕಾರ್ಯವೈಖರಿಯನ್ನು ಸುಧಾರಿಸಲು ಅಗತ್ಯ ಕ್ರಮಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಆಗಸ್ಟ್ 20ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.

ಅನ್ನಭಾಗ್ಯ ಅಕ್ಕಿ ಹಗರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ..!
ಅನ್ನಭಾಗ್ಯ ಯೋಜನೆ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯದ ಅನ್ನಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆಯಾಗುತ್ತಿರುವ ಅಕ್ಕಿಯ ಗುಣಮಟ್ಟ ಹಾಗೂ ಪೂರೈಕೆ ಸರಪಳಿಯಲ್ಲಿನ ಅಕ್ರಮಗಳನ್ನು ಪರಿಶೀಲಿಸಲು ಲೋಕಾಯುಕ್ತ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಬಡ ಜನರಿಗೆ ನೀಡಬೇಕಾದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಉಂಟಾಗುತ್ತಿರುವ ಅಕ್ರಮಗಳು, ಆಡಳಿತ ವೈಫಲ್ಯ ಹಾಗೂ ಸರ್ಕಾರದ ಬೊಕ್ಕಸಕ್ಕೆ ಉಂಟಾಗುತ್ತಿರುವ ನಷ್ಟವನ್ನು ಪರಿಶೀಲಿಸಿ, ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಶಿಫಾರಸುಗಳನ್ನು ಈ ಸಮಿತಿ ಸಲ್ಲಿಸಲಿದೆ.

ಲೋಕಾಯುಕ್ತ ಪ್ರಕಟಣೆ ಪ್ರಕಾರ, ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಮುಖ್ಯಸ್ಥ ಹರ್ಷ ಗುಪ್ತಾ ಸಮಿತಿಯ ಅಧ್ಯಕ್ಷರಾಗಿದ್ದು, ಕರ್ನಾಟಕ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖಬೀಕರ್ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ಸದಸ್ಯರಾಗಿದ್ದಾರೆ.

ತನಿಖೆಯ ವೇಳೆ ಬೆಳಕಿಗೆ ಬಂದಿರುವ ಪ್ರಾಥಮಿಕ ಅಕ್ರಮಗಳು, ಅವ್ಯವಹಾರಗಳು ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಕಾರ್ಯವೈಖರಿಯನ್ನು ಸುಧಾರಿಸಲು ಅಗತ್ಯ ಕ್ರಮಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಆಗಸ್ಟ್ 20ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (ಕೆಎಫ್‌ಸಿಎಸ್‌ಸಿ) ಸಗಟು ಗೋದಾಮುಗಳ ವ್ಯವಸ್ಥಾಪಕರು ಹಾಗೂ ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಮಾರುಕಟ್ಟೆ ಸಂಘಗಳ ಗೋದಾಮುಗಳ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹಾಗೂ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ 27 ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಹಾಗೂ ನ್ಯಾಯಾಂಗ ಅಧಿಕಾರಿಗಳನ್ನು ಒಳಗೊಂಡ ಈ ತಂಡಗಳು ಜೂನ್ 12ರಂದು ರಾಜ್ಯದ ವಿವಿಧ ನ್ಯಾಯಬೆಲೆ ಅಂಗಡಿಗಳು, ಕೆಎಫ್‌ಸಿಎಸ್‌ಸಿ ಸಗಟು ಗೋದಾಮುಗಳು ಹಾಗೂ ತಾಲ್ಲೂಕು ಮಟ್ಟದ ಗೋದಾಮುಗಳ ಮೇಲೆ ದಿಢೀರ್ ಪರಿಶೀಲನೆ ನಡೆಸಿದ್ದವು.

ಈ ಪರಿಶೀಲನೆ ಹಾಗೂ ನಂತರದ ತನಿಖೆಯಲ್ಲಿ ಅನ್ನಭಾಗ್ಯ ಅಕ್ಕಿಯ ಸಂಗ್ರಹ, ಸಾಗಣೆ, ಪೂರೈಕೆ ಹಾಗೂ ವಿತರಣಾ ವ್ಯವಸ್ಥೆಯಲ್ಲಿ ಹಲವು ಅಕ್ರಮಗಳು ಮತ್ತು ಲೋಪಗಳು ಬೆಳಕಿಗೆ ಬಂದಿವೆ ಎಂದು ಲೋಕಾಯುಕ್ತ ತಿಳಿಸಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ರೂಪಿಸಲು ಸಮಿತಿ ಶಿಫಾರಸುಗಳನ್ನು ಸಲ್ಲಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.