ರಾಜ್ಯ

ಬರ ಪರಿಸ್ಥಿತಿ ಎದುರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ: DCM ಪರಮೇಶ್ವರ್

ಜುಲೈ 25ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ವಿಭಾಗದ ಬರ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಲಿದ್ದು, ನಂತರ ಮೈಸೂರು ವಿಭಾಗದಲ್ಲೂ ಇದೇ ರೀತಿಯ ಸಭೆ ನಡೆಯಲಿದೆ.

ಬರ ಪರಿಸ್ಥಿತಿ ಎದುರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ: DCM ಪರಮೇಶ್ವರ್
ಡಿಸಿಎಂ ಪರಮೇಶ್ವರ್
Published On :

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ.ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಪೂರೈಕೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಈಗಾಗಲೇ ಪ್ರತಿ ಜಿಲ್ಲೆಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಜೊತೆಗೆ, ಬರ ನಿರ್ವಹಣೆಗೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ವೈಯಕ್ತಿಕ ಠೇವಣಿ (PD) ಖಾತೆಗಳಲ್ಲಿ ರೂ.329 ಕೋಟಿ ಲಭ್ಯವಿದೆ ಎಂದು ಹೇಳಿದರು.

ಜುಲೈ 25ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ವಿಭಾಗದ ಬರ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಲಿದ್ದು, ನಂತರ ಮೈಸೂರು ವಿಭಾಗದಲ್ಲೂ ಇದೇ ರೀತಿಯ ಸಭೆ ನಡೆಯಲಿದೆ ಎಂದು ತಿಳಿಸಿದರು.

ಈ ಸಭೆಗಳ ಬಳಿಕ ರಾಜ್ಯದ ಒಟ್ಟಾರೆ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ದೊರೆಯಲಿದೆ. ನಂತರ ರೈತರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ತಡೆಯಲು ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ ಗ್ರಾಮೀಣ (VB-G RAM G) ಯೋಜನೆಯಡಿ ತಕ್ಷಣ ಉದ್ಯೋಗ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಈ ಯೋಜನೆಗೆ ಹಣದ ಕೊರತೆ ಇಲ್ಲ. ಯಾವುದೇ ವಿಳಂಬ ಮಾಡದೆ ಕಾಮಗಾರಿಗಳನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎದು ತಿಳಿಸಿದರು.

ಬರ ಪರಿಹಾರ ಅನುದಾನ ಬಿಡುಗಡೆ ಕುರಿತು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ. ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.

ಸಾಮಾನ್ಯವಾಗಿ ಕೇಂದ್ರ ಸರ್ಕಾರ ಆಗಸ್ಟ್‌ನಲ್ಲಿ ಅಧಿಕೃತ ಮನವಿಪತ್ರ (ಮೆಮೊರಾಂಡಂ) ನಿರೀಕ್ಷಿಸುತ್ತದೆ. ಅದನ್ನು ಸಲ್ಲಿಸಿದ ಬಳಿಕ ಅನುದಾನ ಬಿಡುಗಡೆ ಮಾಡಲಿದೆ.

ಮುಂಗಾರು ಆರಂಭದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯನ್ನು ನಂಬಿ ರೈತರು ಬಿತ್ತನೆ ಮಾಡಿದ್ದರು. ಆದರೆ, ನಂತರ ಮಳೆ ಬರದ ಕಾರಣ ಬೆಳೆಗಳು ಒಣಗಿವೆ. ಆಗಸ್ಟ್‌ನಲ್ಲಿ ಉತ್ತಮ ಮಳೆಯಾದರೆ ರೈತರು ಮತ್ತೆ ಬಿತ್ತನೆ ಮಾಡುವ ನಿರೀಕ್ಷೆಯಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.

ಇದೇ ವೇಳೆ, ಜಾನುವಾರುಗಳ ಆಕಸ್ಮಿಕ ಸಾವಿಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಅಡಿಯಲ್ಲಿ ಬಾಕಿ ಇರುವ ರೂ.97.57 ಕೋಟಿ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ಮನವಿ ಮಾಡಲಾಗಿದೆ.

ಸಿದ್ದರಾಮಯ್ಯ ಅವರ 2013-18ರ ಅವಧಿಯಲ್ಲಿ ಆರಂಭವಾಗಿದ್ದ ಈ ಯೋಜನೆ ಬಳಿಕ ಹಣದ ಕೊರತೆಯಿಂದ ಸ್ಥಗಿತಗೊಂಡಿತ್ತು. 2023ರಲ್ಲಿ ಮತ್ತೆ ಜಾರಿಗೊಳಿಸಲಾಗಿದ್ದು, ಅಂದಿನಿಂದ ಈವರೆಗೆ ರೂ.134 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

2023-24ರಿಂದ 2026-27ರವರೆಗೆ ಈ ಯೋಜನೆಯಡಿ 2.17 ಲಕ್ಷ ಕುರಿ ಹಾಗೂ ಮೇಕೆಗಳ ಸಾವು ಮತ್ತು 82,260 ಹಸು ಸೇರಿದಂತೆ ಇತರೆ ದೊಡ್ಡ ಜಾನುವಾರುಗಳ ಸಾವಿಗೆ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.