'ಬಾಬ್ರಿ ಮಸೀದಿಯನ್ನು ಹೇಗೆ ಧ್ವಂಸಗೊಳಿಸಿದ್ದೇವೋ, ರಾಹುಲ್ ಗಾಂಧಿ ವಂಶವನ್ನೂ ನಾಶ ಮಾಡಲು ನಾವು ಸಿದ್ಧ': ಯಶ್ ಪಾಲ್ ಸುವರ್ಣ ವಿರುದ್ಧ FIR; Video
ಯಶಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ಬಾಬ್ರಿ ಮಸೀದಿ ಧ್ವಂಸ ವಿಚಾರವನ್ನು ಪ್ರಸ್ತಾಪಿಸಿ ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ.
ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ ಬಳಿ ನಡೆದ ಪ್ರತಿಭಟನೆಯ ವೇಳೆ ಯಶ್‌ಪಾಲ್ ಸುವರ್ಣ ಮಾನಹಾನಿಕಾರಕ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧವೂ ಶಾಸಕರು ಅವಹೇಳನಕಾರಿ ಪದಗಳನ್ನು ಬಳಸಿದ್ದು, ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಬೆಂಬಲಿಗರ ವಿರುದ್ಧ ಪ್ರಚೋದಿಸಲು ಯತ್ನಿಸಿ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವುದು, ಗಲಭೆಗೆ ಪ್ರೇರೇಪಿಸುವುದು, ಕ್ರಿಮಿನಲ್ ಬೆದರಿಕೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡುವ ಹೇಳಿಕೆಗಳಿಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಕಲಂಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಯಶ್‌ಪಾಲ್ ಸುವರ್ಣ ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಧ್ವನಿ ಎತ್ತಿದವರನ್ನು ವೈಯಕ್ತಿಕ ನಿಂದನೆ, ದ್ವೇಷ ಭಾಷಣ ಹಾಗೂ ಬೆದರಿಕೆಗಳ ಮೂಲಕ ಗುರಿಯಾಗಿಸುವುದು ಬಿಜೆಪಿಯ ವಿದ್ಯಾರ್ಥಿ ವಿರೋಧಿ ಮನೋಭಾವವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಬೆದರಿಕೆ ಉತ್ತರವಾಗಲು ಸಾಧ್ಯವಿಲ್ಲ ಎಂದು ಭಂಡಾರಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಹಾಜರಿದ್ದ ಬಿಜೆಪಿ ಶಾಸಕರು ಮೌನವಾಗಿದ್ದುದನ್ನೂ ಅವರು ಟೀಕಿಸಿದ್ದು, ಅವರ ಮೌನವೇ ಆ ಹೇಳಿಕೆಗೆ ಮೌನ ಸಮ್ಮತಿಯಾಗಿದೆ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯ ವಿಡಿಯೊ ದೃಶ್ಯಾವಳಿಗಳನ್ನು ಕಾಂಗ್ರೆಸ್ ಸಂಗ್ರಹಿಸಿದ್ದು, ತನಿಖೆಯ ಭಾಗವಾಗಿ ಅವುಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಭಂಡಾರಿ ತಿಳಿಸಿದ್ದಾರೆ.
ನೀಟ್ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಈ ಪ್ರತಿಭಟನೆಯನ್ನು ಆಯೋಜಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



