ಕಾವೇರಿ ಕಿಚ್ಚು: KRSಗೆ ಬಿಜೆಪಿ ಮುತ್ತಿಗೆ ಯತ್ನ, ವಿಜಯೇಂದ್ರ, ಆರ್. ಅಶೋಕ್ ಸೇರಿ ಹಲವು ನಾಯಕರು ವಶಕ್ಕೆ! Video
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾವೇರಿ ಜಲ ನಿಯಂತ್ರಣ ಸಮಿತಿ ಶಿಫಾರಸನ್ನು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿರುವುದನ್ನು ತೀವ್ರವಾಗಿ ಖಂಡಿಸಿದರು.

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಆದೇಶವನ್ನು ಖಂಡಿಸಿ, ಮಂಡ್ಯದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿಗೆ ಮುತ್ತಿಗೆ ಹಾಕಲು ಮುಂದಾದ ರಾಜ್ಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಶಿಫಾರಸನ್ನು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿರುವುದನ್ನು ತೀವ್ರವಾಗಿ ಖಂಡಿಸಿದರು.
ರಾಜ್ಯದಲ್ಲಿ ಮಳೆ ಕೊರತೆ ಹಾಗೂ ತೀವ್ರ ಬರ ಪರಿಸ್ಥಿತಿ ಇದ್ದರೂ, 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಆದೇಶಿಸಿರುವುದು ಕರ್ನಾಟಕ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು.
ಕೆಆರ್‌ಎಸ್ ಸಮೀಪದಲ್ಲಿ ಮೊದಲು ಧರಣಿ ನಡೆಸಿದ ಬಿಜೆಪಿ ನಾಯಕರು ಬಳಿಕ ಅಣೆಕಟ್ಟಿನತ್ತ ಮೆರವಣಿಗೆ ನಡೆಸಲು ಮುಂದಾದಾಗ ಪೊಲೀಸರು ತಡೆದು ವಶಕ್ಕೆ ಪಡೆದರು. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಭಾಗವಹಿಸಿದ್ದರು.
ಸರ್ವಪಕ್ಷ ಸಭೆ ಬಹಿಷ್ಕಾರ ಎಚ್ಚರಿಕೆ
ಇದೇ ವೇಳೆ, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟ ಭರವಸೆ ನೀಡದಿದ್ದರೆ, ಆಗಸ್ಟ್ 2ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆದಿರುವ ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿಯನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು. "ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ನಂತರ ರೈತರನ್ನು ಮರೆತಿದ್ದಾರೆ. ಸರ್ಕಾರ ರೈತರ ಸಮಸ್ಯೆಗಳಿಗಿಂತ ಮುಖ್ಯಮಂತ್ರಿ ಕುರ್ಚಿಯ ರಾಜಕೀಯದಲ್ಲೇ ತೊಡಗಿದೆ," ಎಂದು ಅವರು ವಾಗ್ದಾಳಿ ನಡೆಸಿದರು.
ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಮೊದಲು ಕಾನೂನು ತಜ್ಞರು, ರಾಜಕೀಯ ಪಕ್ಷಗಳು ಹಾಗೂ ಸಂಬಂಧಿತ ವಲಯಗಳೊಂದಿಗೆ ಯಾವುದೇ ಗಂಭೀರ ಸಮಾಲೋಚನೆ ನಡೆಸಿಲ್ಲ ಎಂದು ಅವರು ಟೀಕಿಸಿದರು. ಸರ್ವಪಕ್ಷ ಸಭೆಯನ್ನು ಸಿಡಬ್ಲ್ಯುಎಂಎ ಆದೇಶದ ಬಳಿಕ ಕರೆಯುವುದರ ಬಗ್ಗೆ ಪ್ರಶ್ನಿಸಿದ ವಿಜಯೇಂದ್ರ, "ಹಾನಿಯಾದ ನಂತರ ಕೋಪಗೊಂಡರೆ ಏನು ಪ್ರಯೋಜನ?" ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಇದಲ್ಲದೆ, ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಲ್ಲಿ ತಮಿಳುನಾಡಿನಿಂದ ಯಾವುದೇ ಅಧಿಕೃತ ಬೇಡಿಕೆ ಬಾರದಿದ್ದರೂ, ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸದೇ ಹಾಗೂ ವಿಧಾನಮಂಡಲದಲ್ಲೂ ವಿಷಯ ಪ್ರಸ್ತಾಪಿಸದೇ 3.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು.
ಸರ್ಕಾರದ ಕ್ರಮವನ್ನು "ರಾಜಕೀಯ ನಾಟಕ" ಎಂದು ಬಣ್ಣಿಸಿದ ವಿಜಯೇಂದ್ರ, ಕರ್ನಾಟಕ ರೈತರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಯಾವುದೇ ನಿರ್ಧಾರವನ್ನು ಬಿಜೆಪಿ ಹಾಗೂ ಕನ್ನಡಪರ ಸಂಘಟನೆಗಳು ನಿರಂತರವಾಗಿ ವಿರೋಧಿಸಲಿವೆ ಎಂದು ಎಚ್ಚರಿಕೆ ನೀಡಿದರು.
"ರಾಜಕೀಯಕ್ಕಿಂತ ಕರ್ನಾಟಕದ ರೈತರಿಗೆ ನ್ಯಾಯ ದೊರಕುವುದು ಮುಖ್ಯ. ಮೊದಲು ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಘೋಷಿಸಲಿ. ನಂತರವೇ ನಾವು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ," ಎಂದು ವಿಜಯೇಂದ್ರ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




