ರಾಜ್ಯ

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು (ಒಟ್ಟು ಸುಮಾರು 4 ಟಿಎಂಸಿ) ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ವಿರೋಧಿಸಿ, ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ಜಲ ನಿಯಂತ್ರಣ ಸಮಿತಿ (CWRC), ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು (ಒಟ್ಟು ಸುಮಾರು 4 ಟಿಎಂಸಿ) ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ವಿರೋಧಿಸಿ, ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿವೆ.

ಕರ್ನಾಟಕ ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್, ರಾಜ್ಯದಾದ್ಯಂತ ವ್ಯಾಪಾರಿಗಳು, ವಿವಿಧ ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಜಲಾಶಯಗಳಿಗೆ ಸಮರ್ಪಕ ನೀರಿನ ಹರಿವು ಇಲ್ಲದಿರುವುದು, ಕುಡಿಯುವ ನೀರು ಹಾಗೂ ನೀರಾವರಿಗೆ ತೊಂದರೆಯಾಗುವ ಆತಂಕದ ನಡುವೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಈ ಬಂದ್‌ಗೆ ರಾಜ್ಯದ ಜನರು ಸಂಪೂರ್ಣ ಸಹಕಾರ ನೀಡಬೇಕು. ಬೆಳಗಾವಿಯಿಂದ ಚಾಮರಾಜನಗರದವರೆಗೆ ಕರ್ನಾಟಕ ಬಂದ್ ಅನ್ನು ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದರು.

ಕಾವೇರಿ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳ ವಿರುದ್ಧವೂ ಅವರು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲೇ ತೀವ್ರ ನೀರಿನ ಕೊರತೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದರೆ ರಾಜ್ಯದ ರೈತರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಈ ನಡುವೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂಬ ನಿರ್ದೇಶನವನ್ನು ಎತ್ತಿಹಿಡಿದಿದೆ.

ಸಿಡಬ್ಲ್ಯುಎಂಎ (CWMA) ನಿರ್ದೇಶನವನ್ನು ಕಾನೂನುಬದ್ಧವಾಗಿ ಪ್ರಶ್ನಿಸುವುದಾಗಿ ಕರ್ನಾಟಕ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.