ಕರ್ನಾಟಕಕ್ಕೆ ಮುಂಗಾರು ಎಂಟ್ರಿ: ಕರಾವಳಿ-ಮಲೆನಾಡು ಜಿಲ್ಲೆಗಳಿಗೆ Red ಅಲರ್ಟ್ ಘೋಷಣೆ; ಭಾರೀ ಮಳೆ-ಬಿರುಗಾಳಿ ಸಾಧ್ಯತೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೋಮವಾರ ಹಾಗೂ ಮಂಗಳವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮುಂಗಾರು ಮುಂದಿನ ಎರಡು-ಮೂರು ದಿನಗಳಲ್ಲಿ ರಾಜ್ಯದ ಇನ್ನಷ್ಟು ಭಾಗಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ. ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲಿನ ಮೇಲ್ಮಟ್ಟದ ಚಂಡಮಾರುತ ಪರಿಚಲನೆ ಹಾಗೂ ಕರಾವಳಿ ಕರ್ನಾಟಕದ ಮೂಲಕ ಹಾದುಹೋಗಿರುವ ಗಾಳಿಯ ಪರಿಣಾಮ ರಾಜ್ಯದಾದ್ಯಂತ ಮಳೆಯ ಚಟುವಟಿಕೆಗಳು ಹೆಚ್ಚಾಗಲಿವೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೋಮವಾರ ಹಾಗೂ ಮಂಗಳವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಮತ್ತು ಬುಧವಾರ ರೆಡ್ ಅಲರ್ಟ್ ನೀಡಲಾಗಿದೆ. ಈ ಅವಧಿಯಲ್ಲಿ ಅತಿ ಭಾರೀ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಮಲೆನಾಡು ಭಾಗದಲ್ಲೂ ಮಳೆ ಅಬ್ಬರ ಮುಂದುವರಿಯಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಸೋಮವಾರದಿಂದ ಗುರುವಾರದವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ರಾಯಚೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬುಧವಾರ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಸೋಮವಾರದಿಂದ ಬುಧವಾರದವರೆಗೆ ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿ ಸಹ ಬೀಸುವ ಸಾಧ್ಯತೆ ಇದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಾರಪೂರ್ತಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಮೈಸೂರು, ಮಂಡ್ಯ, ರಾಮನಗರ, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆಯೊಂದಿಗೆ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಿಕೆ, ಪ್ರವಾಹ, ಮರಗಳು ಉರುಳುವಿಕೆ ಹಾಗೂ ಸಂಚಾರ ವ್ಯತ್ಯಯದ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ಇದರ ನಡುವೆ, ಭಾನುವಾರ ಸಂಜೆ ಬೆಂಗಳೂರಿನ ಹೃದಯಭಾಗದಲ್ಲಿರುವ ಅಲಿ ಅಸ್ಕರ್ ಕ್ರಾಸ್ ರಸ್ತೆಯಲ್ಲಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ಭಾರೀ ಸಂಚಾರ ದಟ್ಟಣೆ ಉಂಟಾಯಿತು.
ರಾಜಭವನ ರಸ್ತೆ ಮತ್ತು ಇನ್‌ಫ್ಯಾಂಟ್ರಿ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.
ಮರ ಬಿದ್ದ ಪರಿಣಾಮ ಹಳೆಯ LRDE ಕಟ್ಟಡದ ಕಾಂಪೌಂಡ್ ಗೋಡೆಗೂ ಹಾನಿಯಾಗಿದೆ. ಕೆಲ ಪಾದಚಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ಪೊಲೀಸರು ತಕ್ಷಣ ಪರ್ಯಾಯ ಮಾರ್ಗಗಳಿಗೆ ವಾಹನಗಳನ್ನು ತಿರುಗಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳು ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ.
ಜನರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



