ರಾಜ್ಯ

ಪ್ರಧಾನಿ ಮೋದಿ ಭೇಟಿ ಮಾಡಿದ ಡಿಕೆಶಿ; ರಾಜ್ಯದ ಅಭಿವೃದ್ಧಿಗೆ ಸಹಕಾರ ಕೋರಿದ ಸಿಎಂ

ಕರ್ನಾಟಕದ ಅಭಿವೃದ್ಧಿ ಆದ್ಯತೆಗಳ ಕುರಿತು ಪ್ರಧಾನಿಯೊಂದಿಗೆ ರಚನಾತ್ಮಕ ಚರ್ಚೆ ನಡೆಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಡಿಕೆಶಿ; ರಾಜ್ಯದ ಅಭಿವೃದ್ಧಿಗೆ ಸಹಕಾರ ಕೋರಿದ ಸಿಎಂ
ಪ್ರಧಾನಿ ಮೋದಿ ಭೇಟಿ ಮಾಡಿದ ಡಿಕೆಶಿ
Published On :

ನವದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದ ಅಭಿವೃದ್ಧಿಗೆ ಸಹಕಾರ ಕೋರಿದ್ದಾರೆ.

ಮೂಲಸೌಕರ್ಯ, ಹೂಡಿಕೆ, ನೀರಾವರಿ, ನಾವೀನ್ಯತೆ ಮತ್ತು ನಮ್ಮ ಜನರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಉಪಕ್ರಮಗಳು ಸೇರಿದಂತೆ ಕರ್ನಾಟಕದ ಅಭಿವೃದ್ಧಿ ಆದ್ಯತೆಗಳ ಕುರಿತು ಪ್ರಧಾನಿಯೊಂದಿಗೆ ರಚನಾತ್ಮಕ ಚರ್ಚೆ ನಡೆಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕವು ಯಾವಾಗಲೂ ಭಾರತದ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡಿದೆ ಮತ್ತು ಆ ಪಾತ್ರವನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ನಾನು ಪುನರುಚ್ಚರಿಸಿದೆ. ಅಭಿವೃದ್ಧಿಯನ್ನು ವೇಗಗೊಳಿಸಲು, ಹೆಚ್ಚಿನ ಅವಕಾಶಗಳನ್ನು ಆಕರ್ಷಿಸಲು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳನ್ನು ಪೂರೈಸಲು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ಈ ಭೇಟಿಯ ಬಳಿಕ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡ ಮುಖ್ಯಮಂತ್ರಿಗಳು, ಕರ್ನಾಟಕದ ಮೂಲಸೌಕರ್ಯ, ಹೂಡಿಕೆ, ನಗರಾಭಿವೃದ್ಧಿ, ನೀರಾವರಿ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಪ್ರಗತಿಯ ಬಗ್ಗೆ ಪ್ರಧಾನಿಯವರೊಂದಿಗೆ ಸಕಾರಾತ್ಮಕ ಚರ್ಚೆ ನಡೆಸಲಾಗಿದೆ. ವಿಶೇಷವಾಗಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅಗತ್ಯವಿರುವ ಅರ್ಬನ್ ಮೊಬಿಲಿಟಿ ಯೋಜನೆಗಳು ಹಾಗೂ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದ ಸಹಕಾರ ಕೋರಲಾಗಿದೆ ಎಂದರು.

ಕರಾವಳಿ-ಮಲೆನಾಡಿನ ಅಭಿವೃದ್ಧಿಗೂ ಒತ್ತು

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಭಾಗಿತ್ವದಲ್ಲಿ ಹೊಸ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಗ್ರಾಮೀಣ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆಯೂ ಚರ್ಚಿಸಲಾಗಿದೆ. ಒಟ್ಟಾರೆಯಾಗಿ ಬಲಿಷ್ಠ ಕರ್ನಾಟಕದ ಮೂಲಕ ಬಲಿಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪಕ್ಕೆ ಇಬ್ಬರೂ ನಾಯಕರು ಸಹಮತ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರು ಕೂಡ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.