Kalaburagi: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲಾ ಛಾವಣಿ ಕುಸಿದು ಅವಘಡ; 5 ವಿದ್ಯಾರ್ಥಿನಿಯರಿಗೆ ಗಾಯ; Video
ತರಗತಿ ನಡೆಯುತ್ತಿದ್ದ ವೇಳೆ ಮೇಲ್ಚಾವಣಿಯ ಸಿಮೆಂಟ್ ಪದರು ಏಕಾಏಕಿ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.

ಕಲಬುರಗಿ: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲೆಯ ಮೇಲ್ಚಾವಣಿಯ ಒಂದು ಭಾಗ ಕುಸಿದ ಪರಿಣಾಮ ಐದು ಮಂದಿ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ನಗರದ ಎಸ್ಪಿ ಕಚೇರಿ ಸಮೀಪದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ತರಗತಿ ನಡೆಯುತ್ತಿದ್ದ ವೇಳೆ ಮೇಲ್ಚಾವಣಿಯ ಸಿಮೆಂಟ್ ಪದರು ಏಕಾಏಕಿ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.
ಪ್ರಥಮ ಪಿಯುಸಿ ಕಾಮರ್ಸ್ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು, ಅಪಘಾತ ಸಂಭವಿಸಿದ ವೇಳೆ ತರಗತಿಯಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪಾಠ ಆಲಿಸುತ್ತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಪೂಜಾ, ಸೃಷ್ಟಿ, ನಿಶಾ, ಶಿತಲ್ ಸೇರಿದಂತೆ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ತಲೆ, ಬೆನ್ನು ಹಾಗೂ ಮೊಣಕೈ ಭಾಗಗಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಡಿಯೋ ವೈರಲ್
ಇನ್ನು ಅವಘಡದ ದೃಶ್ಯಗಳು ಕಾಲೇಜಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭಯಭೀತರಾದ ವಿದ್ಯಾರ್ಥಿನಿಯರು ತರಗತಿಯಿಂದ ಹೊರಗೆ ಓಡಿ ಬರುತ್ತಿರುವುದು ಕಂಡುಬಂದಿದೆ. ಕಟ್ಟಡದ ದುಸ್ಥಿತಿ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆಯೇ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿವೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಮತ್ತು ಸಾರ್ವಜನಿಕರು ಕಾಲೇಜು ಆಡಳಿತ ಹಾಗೂ ಸಂಬಂಧಿತ ಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಶಾಸಕ, ತನಿಖೆಗೆ ಆದೇಶ
ಇನ್ನು ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಕಾಲೇಜು ಪರಿಶೀಲಿಸಿದರು. ಬಳಿಕ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗಳಿಂದ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ವೇಳೆ 'ಮೇಲ್ಚಾವಣಿಯ ಸಿಮೆಂಟ್ ಪದರು ಕಳಚಿ ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. 2016ರಲ್ಲಿ ನಿರ್ಮಿಸಲಾದ ಕಟ್ಟಡದಲ್ಲಿ ಕಳಪೆ ಕಾಮಗಾರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ಹೇಳಿದರು.
ಈ ಘಟನೆ ಹಿನ್ನೆಲೆಯಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಕಟ್ಟಡಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿದ್ದು, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಜಿಲ್ಲೆಯ ಶಾಲಾ-ಕಾಲೇಜುಗಳ ಕಟ್ಟಡಗಳ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



