ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಗ್ಯಾರಂಟಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ. ಅದರ ನಂತರವೂ ಗ್ಯಾರಂಟಿಗಳು ಮುಂದುವರಿಯಲಿವೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದಿದ್ದಾರೆ.
ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ. ಅದು ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು, ನಂತರದ ದಿನಗಳಲ್ಲಿ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದರು. ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ಪುಕಾರು ಹಬ್ಬಿಸುತ್ತಿದ್ದಾರೆ. ಇದು ಅವರ ರಾಜಕೀಯ ಹತಾಶೆಯ ಪ್ರತೀಕ.
ಮುಖ್ಯಮಂತ್ರಿಯಾಗಿ ಐದು ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿದ್ದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕತೆ ಮೇಲೆ ಏನೂ ದುಷ್ಪರಿಣಾಮ ಬೀರದಂತೆ ನೋಡಿಕೊಂಡಿದ್ದೇನೆ. ಇಂದು ಕರ್ನಾಟಕ ರಾಜ್ಯವು ತಲಾವಾರು ಆದಾಯದಲ್ಲಿ ದೇಶಕ್ಕೇ ಮೊದಲನೇ ಸ್ಥಾನದಲ್ಲಿದೆ, ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರದ ಎರಡನೇ ರಾಜ್ಯ ಕರ್ನಾಟಕ. ಖಜಾನೆ ಖಾಲಿಯಾಗಿದ್ದರೆ, ಸರ್ಕಾರ ದಿವಾಳಿ ಸ್ಥಿತಿಯಲ್ಲಿದ್ದರೆ ಈ ಸಾಧನೆ ಸಾಧ‍್ಯವೇ?
ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ, ಅದೇ ಯೋಜನೆಗಳನ್ನು ಮಧ್ಯಪ್ರದೇಶ, ಬಿಹಾರ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ನಕಲು ಹೊಡೆದು ಅಧಿಕಾರಕ್ಕೆ ಬಂದಿದೆ. ಇವರಿಗೆ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಯಾವ ನೈತಿಕತೆ ಇದೆ? ಕೆಲವು ರಾಜ್ಯಗಳ ಚುನಾವಣಾ ಪೂರ್ವದಲ್ಲಿ ಬಿಜೆಪಿ ಗ್ಯಾರಂಟಿ ಯೋಜನೆಗಳ ಆಶ್ವಾಸನೆ ನೀಡಿದರೂ ಅವುಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ.
ಈ ಯೋಜನೆಗಳು ನಿಜವಾದ ಅರ್ಹರಿಗೆ ಸಿಗಬೇಕು, ಅದು ಅನರ್ಹರ ಪಾಲಾದಾಗ ಅದನ್ನು ತಡೆಗಟ್ಟುವುದು ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ನಮ್ಮ ಜನರು ಕೂಡಾ ಈ ಬಗ್ಗೆ ಯೋಚನೆ ಮಾಡಬೇಕಾಗಿದೆ. ದುರಾಸೆಗೆ ಬಲಿಬಿದ್ದು ಸರ್ಕಾರಕ್ಕೆ ಮೋಸ ಮಾಡಿ ಗ್ಯಾರಂಟಿ ಯೋಜನೆಗಳ ಲಾಭ ತೆಗೆದುಕೊಳ್ಳುವುದು ಕಾನೂನಿನ ಉಲ್ಲಂಘನೆ ಮಾತ್ರವಲ್ಲ, ರಾಜ್ಯದ ಜನತೆಗೆ ಬಗೆವ ದ್ರೋಹವಾಗಿದೆ. ಇಂತಹ ವಿಷಯದಲ್ಲಿ ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಅಪಪ್ರಚಾರ ಮಾಡಲು ಹೋಗದೆ, ಅರ್ಹರಿಗೆ ಯೋಜನೆಗಳನ್ನು ತಲುಪಿಸಲು ಸರ್ಕಾರಕ್ಕೆ ನೆರವಾಗಬೇಕು ಎಂದು ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



