ಏಕಾಏಕಿ ನಿಲ್ದಾಣಕ್ಕೆ ನುಗ್ಗಿದ KSRTC ಬಸ್: ವ್ಯಕ್ತಿಗೆ ಡಿಕ್ಕಿ, ಗಂಭೀರ ಗಾಯ
ಬೆಂಗಳೂರು-ಧರ್ಮಸ್ಥಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (KA-21 F-0151) ರಾತ್ರಿ ಸುಮಾರು 11 ಗಂಟೆ ವೇಳೆಗೆ ಚನ್ನರಾಯಪಟ್ಟಣ ನೂತನ ಬಸ್ ನಿಲ್ದಾಣಕ್ಕೆ ಪ್ರವೇಶಿಸುವ ವೇಳೆ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

ಹಾಸನ: ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಬಸ್ ನಿಲ್ದಾಣದೊಳಗೆ ನುಗ್ಗಿದ್ದು, ಈ ವೇಳೆ ಅಲ್ಲಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನೂತನ ಬಸ್ ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಬೆಂಗಳೂರು-ಧರ್ಮಸ್ಥಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (KA-21 F-0151) ರಾತ್ರಿ ಸುಮಾರು 11 ಗಂಟೆ ವೇಳೆಗೆ ಚನ್ನರಾಯಪಟ್ಟಣ ನೂತನ ಬಸ್ ನಿಲ್ದಾಣಕ್ಕೆ ಪ್ರವೇಶಿಸುವ ವೇಳೆ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.
ಬಸ್ ಅನ್ನು ನಿಲುಗಡೆ ಮಾಡಲು ಚಾಲಕ ಮುಂದಾದಾಗ ಅದು ವೇಗವಾಗಿ ನಿಲ್ದಾಣದ ಒಳಭಾಗಕ್ಕೆ ನುಗ್ಗಿ ಅಲ್ಲಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಅವರ ಎದೆ ಹಾಗೂ ಎಡಗೈಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರಯಾಣಿಕರು ತಕ್ಷಣವೇ ಗಾಯಾಳುವಿನ ನೆರವಿಗೆ ಧಾವಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಮಂಜುನಾಥ್ ಅವರು ಗಾಯಗೊಂಡಿರುವುದು, ಸುತ್ತಮುತ್ತಲಿನ ಜನರು ಅವರಿಗೆ ನೆರವು ನೀಡುತ್ತಿರುವ ಕಂಡು ಬಂದಿದೆ.
ಈ ಅವಘಡ ಪ್ರಯಾಣಿಕರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇದೇ ಬಸ್ ನಿಲ್ದಾಣದಲ್ಲಿ ಕೆಲವು ವರ್ಷಗಳ ಹಿಂದೆ ಇದೇ ರೀತಿಯ ಅಪಘಾತ ಸಂಭವಿಸಿದ್ದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣದೊಳಗೆ ವೇಗ ನಿಯಂತ್ರಣ ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಜಾರಿಗೆ ತಂದಿತ್ತು.
ಆದರೆ, ಮತ್ತೊಮ್ಮೆ ಇಂತಹ ಘಟನೆ ನಡೆದಿರುವುದು ಸುರಕ್ಷತಾ ಕ್ರಮಗಳ ಅನುಷ್ಠಾನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಸ್ ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



