ಎಲ್ಲೆಂದ್ರಲ್ಲಿ ಗಾಡಿ ನಿಲ್ಸೋ ಸವಾರರೇ ಎಚ್ಚರ: ಟೋಯಿಂಗ್ ಕಾರ್ಯಾಚರಣೆ ಮತ್ತೆ ಆರಂಭ!
ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಬೆಂಗಳೂರು ದಕ್ಷಿಣ ನಗರ ನಿಗಮ ಮುಂದಾಗಿದೆ.

ಬೆಂಗಳೂರು: ಎಲ್ಲೆಂದರೆ ಅಲ್ಲಿ ವಾಹನ ನಿಲ್ಲಿಸುತ್ತಿದ್ದ ವಾಹನ ಸವಾರರಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭವಾಗುತ್ತಿದೆ.
ಹೌದು.. ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಬೆಂಗಳೂರು ದಕ್ಷಿಣ ನಗರ ನಿಗಮ ಮುಂದಾಗಿದ್ದು, ಜಯನಗರ ವಲಯದಲ್ಲಿ ಮುಂದಿನ ವಾರದಿಂದ ಟೋಯಿಂಗ್ ವಾಹನಗಳ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಜ್ಜಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಹಾಗೂ ಬೆಂಗಳೂರು ದಕ್ಷಿಣ ನಗರ ನಿಗಮದ ಆಯುಕ್ತ ಕೆ.ಎನ್. ರಮೇಶ್ ಅವರು ಶನಿವಾರ ಜಯನಗರ ವಲಯದಲ್ಲಿ ನಿಯೋಜಿಸಲಾಗಲಿರುವ ಟೋಯಿಂಗ್ ವಾಹನಗಳನ್ನು ಪರಿಶೀಲಿಸಿದರು.
ಅನಧಿಕೃತವಾಗಿ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಆಯುಕ್ತ ಕೆ.ಎನ್. ರಮೇಶ್, "ಜಯನಗರ ವಲಯದ ಪ್ರಮುಖ ರಸ್ತೆಗಳಲ್ಲಿ ಅನಧಿಕೃತ ಪಾರ್ಕಿಂಗ್ ತಡೆಗಟ್ಟಲು ದಕ್ಷಿಣ ನಗರ ನಿಗಮವು ಹೊರಗುತ್ತಿಗೆ ಆಧಾರದಲ್ಲಿ ಮೂರು ಹೊಸ ಟೋಯಿಂಗ್ ವಾಹನಗಳನ್ನು ಒದಗಿಸಿಕೊಂಡಿದೆ. ಈ ವಾಹನಗಳಿಗೆ ಸಾರಿಗೆ ಇಲಾಖೆಯಿಂದ ಅಗತ್ಯ ಫಿಟ್ನೆಸ್ ಪ್ರಮಾಣಪತ್ರಗಳನ್ನು ಪಡೆಯಲಾಗಿದೆ. ಶೀಘ್ರದಲ್ಲೇ ಅವುಗಳನ್ನು ಅಧಿಕೃತವಾಗಿ ಸಂಚಾರ ಪೊಲೀಸರಿಗೆ ಹಸ್ತಾಂತರಿಸಲಾಗುವುದು" ಎಂದು ಹೇಳಿದರು.
ಕಾರ್ಯಾಚರಣೆ ಆರಂಭವಾದ ನಂತರ ಪಾರ್ಕಿಂಗ್ ನಿಯಮಗಳನ್ನು ಉಲ್ಲಂಘಿಸಿ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿರುವವರ ವಿರುದ್ಧ ಸಂಚಾರ ಪೊಲೀಸರು ಕ್ರಮ ಕೈಗೊಂಡು, ವಾಹನಗಳನ್ನು ಟೋಯಿಂಗ್ ಮಾಡುವ ಕಾರ್ಯ ಆರಂಭಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪರಿಶೀಲನೆ ಸಂದರ್ಭದಲ್ಲಿ ನಿಗಮದ ಮುಖ್ಯ ಎಂಜಿನಿಯರ್ ಬಸವರಾಜ ಕಬಾಡೆ ಹಾಗೂ ಟ್ರಾಫಿಕ್ ಎಂಜಿನಿಯರಿಂಗ್ ಘಟಕದ ಕಾರ್ಯನಿರ್ವಾಹಕ ಎಂಜಿನಿಯರ್ ಜನಾರ್ದನ್ ಉಪಸ್ಥಿತರಿದ್ದರು. ನಗರದ ಸಂಚಾರ ದಟ್ಟಣೆ ಮತ್ತು ಅಸ್ತವ್ಯಸ್ತ ಪಾರ್ಕಿಂಗ್ ಸಮಸ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



