ಫ್ಲೈಓವರ್ ನಿರ್ಮಿಸುತ್ತಿರುವಾಗ ರಸ್ತೆಗೆ ವೈಟ್‌ಟಾಪಿಂಗ್ ಏಕೆ? ಬಿಲ್ ಗಾಗಿ ಕಾಮಗಾರಿಯೇ? B-SMILE ನಿರ್ದೇಶಕರಿಗೆ ಕೃಷ್ಣ ಬೈರೇಗೌಡ ತರಾಟೆ
ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಗೆ ಸುಮಾರು 10 ಕೋಟಿ ರು. ವೆಚ್ಚವಾಗುತ್ತದೆ. ಈ ರಸ್ತೆಗಳ ಬಾಳಿಕೆ ಅವಧಿಯಲ್ಲಿ ಡಾಂಬರೀಕರಣವನ್ನು ಐದಾರು ಬಾರಿ ಮಾಡಬೇಕಾಗಿದ್ದು, ಅದಕ್ಕೆ ಹೆಚ್ಚು ವೆಚ್ಚವಾಗುತ್ತದೆ.

ಬೆಂಗಳೂರು: ಜೆಸಿ ರಸ್ತೆಯಿಂದ ಎನ್ಆರ್ ರಸ್ತೆಗೆ ಫ್ಲೈಓವರ್ ನಿರ್ಮಿಸಲಾಗುತ್ತದೆ ಎಂದು ತಿಳಿದಿದ್ದರೂ ನೀವು ರಸ್ತೆಯನ್ನು (ಜೆಸಿ ರಸ್ತೆಯಿಂದ ಎನ್ಆರ್ ರಸ್ತೆಗೆ) ವೈಟ್‌ಟಾಪಿಂಗ್ ಮಾಡಿರುವುದು ಏಕೆ? ಇದರಿಂದ ಹಣ ವ್ಯರ್ಥವಲ್ಲವೇ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಈ ಪ್ರಶ್ನೆಗಳಿಗೆ ಬೆಂಗಳೂರು ಬೃಹತ್ ಯೋಜನೆಗಳ ಅನುಷ್ಠಾನಕ್ಕೆ ರಚನೆಯಾಗಿರುವ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನ (ಬಿ–ಸ್ಮೈಲ್) ಅಧಿಕಾರಿಗಳು ನಿರುತ್ತರರಾದರು. ಇಂತಹ ಕೆಲಸ ಮುಂದೆ ಆಗಬಾರದು. ಸಮಗ್ರ ಯೋಜನೆ ರೂಪಿಸಿ, ಕಾರ್ಯಗತಗೊಳಿಸಬೇಕು’ ಎಂದು ತಾಕೀತು ಮಾಡಿದರು.
ಬಿ–ಸ್ಮೈಲ್ ಯೋಜನೆಗಳ ಪರಿಶೀಲನಾ ಸಭೆಯನ್ನು ಸೋಮವಾರ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ‘ಬೆಂಗಳೂರಿನ ದೀರ್ಘಕಾಲದ ಸಂಚಾರ ದಟ್ಟಣೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಬಿ-ಸ್ಮೈಲ್ ವತಿಯಿಂದ ಸಂಚಾರ ಸಮಸ್ಯೆಗಳಿಗೆ ದೀರ್ಘಾವಧಿಯ ಪರಿಹಾರ ಒದಗಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ನೀಲನಕ್ಷೆ ರೂಪಿಸಿದ್ದು, ಅನೇಕ ಯೋಜನೆಗಳು ಅನುಷ್ಠಾನದ ಹಂತದಲ್ಲಿವೆ. ನಾನು ಯಾವುದೇ ಹೊಸ ಸಲಹೆ-ಸೂಚನೆಗಳನ್ನು ನೀಡಿಲ್ಲ.
ಈಗಾಗಲೇ ರೂಪಿಸಿರುವ ಯೋಜನೆಗಳನ್ನು ತ್ವರಿತವಾಗಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲಾಗಿದೆ’ ಎಂದು ಹೇಳಿದರು. ನಗರದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ ರಸ್ತೆಗಳು ಹಾಳಾದರೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ 2016ರಿಂದ ಪ್ರಮುಖ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮುಖ್ಯ ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು, ಪದೇಪದೇ ಹಾಳಾಗುವುದನ್ನು ತಡೆಯಲು ಹಾಗೂ 20 ವರ್ಷಗಳಿಂದ 30 ವರ್ಷ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ಈ ಕಾಮಗಾರಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಗೆ ಸುಮಾರು 10 ಕೋಟಿ ರು. ವೆಚ್ಚವಾಗುತ್ತದೆ. ಈ ರಸ್ತೆಗಳ ಬಾಳಿಕೆ ಅವಧಿಯಲ್ಲಿ ಡಾಂಬರೀಕರಣವನ್ನು ಐದಾರು ಬಾರಿ ಮಾಡಬೇಕಾಗಿದ್ದು, ಅದಕ್ಕೆ ಹೆಚ್ಚು ವೆಚ್ಚವಾಗುತ್ತದೆ. ಆದ್ದರಿಂದ ದೀರ್ಘಕಾಲ ಬಾಳಿಕೆ ಬರುವ, ಗುಂಡಿ ಮುಕ್ತ ರಸ್ತೆಗಳನ್ನು ನಿರ್ಮಿಸುವ ಉದ್ದೇಶದಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.
‘ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳನ್ನು ನಿರ್ಮಿಸುವುದರ ಜೊತೆಗೆ ಗುಣಮಟ್ಟದ ಪಾದಚಾರಿ ಮಾರ್ಗಗಳನ್ನೂ ನಿರ್ಮಿಸಲಾಗುತ್ತಿದೆ. ವೈಟ್ ಟಾಪಿಂಗ್ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಯಾವುದೇ ಸಮಸ್ಯೆ ಇಲ್ಲ. ಅಧಿಕಾರಿಗಳು ಗುತ್ತಿಗೆದಾರರ ಮೇಲೆ ಒತ್ತಡ ಹೇರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದೇನೆ’ ಎಂದು ಮಾಹಿತಿ ನೀಡಿದರು.
‘ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಎಲ್ಲಾ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ಸಾಮಗ್ರಿಗಳನ್ನು ರಾಶಿ ಮಾಡುವುದು, ಜೆಲ್ಲಿ ಹಾಕಿ ಹಾಗೆಯೇ ಬಿಡುವುದು ಹಾಗೂ ರಸ್ತೆ ಅಗೆದು ನಿರ್ಲಕ್ಷ್ಯ ವಹಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ಸ್ಥಳ ಪರಿಶೀಲನೆ ವೇಳೆ ಸಮಸ್ಯೆಗಳು ಕಂಡುಬಂದರೆ ಅವುಗಳನ್ನು ತಕ್ಷಣ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ’ ಎಂದರು.
ಹೊರ ವರ್ತುಲ ರಸ್ತೆಯ ಮರುವಿನ್ಯಾಸಕ್ಕಾಗಿ 450 ಕೋಟಿ ರು. ವೆಚ್ಚದ ಸಮಗ್ರ ಯೋಜನೆ ರೂಪಿಸಲಾಗಿದೆ. ಮೆಟ್ರೊ ಕಾಮಗಾರಿಯೊಂದಿಗೆ ಈ ಯೋಜನೆಯನ್ನು ಏಕಕಾಲದಲ್ಲಿ ಆರಂಭಿಸಿದರೆ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಚಾರ ಪೊಲೀಸರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.
ಸುರಂಗ ರಸ್ತೆ: ಟೆಂಡರ್ ಪ್ರಕ್ರಿಯೆ ಪೂರ್ಣ
ಉತ್ತರ-ದಕ್ಷಿಣಕ್ಕೆ 16.7 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಸಚಿವ ಸಂಪುಟದ ಅನುಮೋದನೆಯ ಬಳಿಕ ಯೋಜನೆ ಅನುಷ್ಠಾನಗೊಳ್ಳಲಿದೆ.
ಪೂರ್ವ-ಪಶ್ಚಿಮ ಸುರಂಗ ಮಾರ್ಗ ಯೋಜನೆಯಡಿ ಹಳೆ ಮದ್ರಾಸ್ ರಸ್ತೆಯಿಂದ ಮೈಸೂರು ರಸ್ತೆಯವರೆಗೆ 22 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಿನ ಹಂತದಲ್ಲಿ ಟೆಂಡರ್ ಆಹ್ವಾನಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು. ನಗರದ ಸಂಚಾರ ದಟ್ಟಣೆಗೆ ದೀರ್ಘಾವಧಿಯ ಪರಿಹಾರ ಕಲ್ಪಿಸುವ ಉದ್ದೇಶದಿಂದ 150 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್‌ಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದರಲ್ಲಿ 75 ಕಿ.ಮೀ. ಉದ್ದದ ಕಾರಿಡಾರ್ ನಿರ್ಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ ಎಂದರು.
ಎಲಿವೇಟೆಡ್ ಹಾಗೂ ಸುರಂಗ ರಸ್ತೆ ನಿರ್ಮಾಣವಾದ ನಂತರ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




