ಬೆಂಗಳೂರು: ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ 85ರ ವೃದ್ಧ; ಅನಾರೋಗ್ಯ ಸಮಸ್ಯೆಗೆ ನೊಂದು ಕಠಿಣ ನಿರ್ಧಾರ..!
ಕೆಲ ದಿನಗಳ ಹಿಂದೆ ದಂಪತಿ ಬೆಂಗಳೂರಿನಲ್ಲಿರುವ ತಮ್ಮ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರ ಮನೆಗೆ ಬಂದಿದ್ದರು. ಇಬ್ಬರೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಕ್ಕಳಿಗೆ ತಾವು ಹೊರೆಯಾಗಬಾರದು ಎಂಬ ಮನೋಭಾವದಿಂದ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೆಂಗಳೂರು: ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಬಳಿಕ 85 ವರ್ಷದ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆಯೊಂದು ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬಿಹಾರ ಮೂಲದ ಶಿವಾನಂದನ್ ಪ್ರಸಾದ್ (85) ಹಾಗೂ ಅವರ ಪತ್ನಿ ಸುಮಿತ್ರಾ ದೇವಿ (77) ಎಂದು ಗುರುತಿಸಲಾಗಿದೆ.
ಸುಮಿತ್ರಾ ದೇವಿ ಕಣ್ಣು ಮತ್ತು ಕಿವಿ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದರು. ಶಿವಾನಂದನ್ ಪ್ರಸಾದ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳಿದ್ದವು ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ದಂಪತಿ ಬೆಂಗಳೂರಿನಲ್ಲಿರುವ ತಮ್ಮ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರ ಮನೆಗೆ ಬಂದಿದ್ದರು. ಇಬ್ಬರೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಕ್ಕಳಿಗೆ ತಾವು ಹೊರೆಯಾಗಬಾರದು ಎಂಬ ಮನೋಭಾವದಿಂದ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶಿವಾನಂದನ್ ಪ್ರಸಾದ್ ಅವರು ದಿಂಬಿನ ಸಹಾಯದಿಂದ ಪತ್ನಿಯ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದು, ಬಳಿಕ ಲುಂಗಿಯೊಂದನ್ನು ಬಳಸಿ ಕಿಟಕಿಯ ಗ್ರಿಲ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಂಗಳವಾರ ಬೆಳಗ್ಗೆ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರು ಪೋಷಕರನ್ನು ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಬಳಿಕ ಸುತ್ತಿಗೆಯಿಂದ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಇಬ್ಬರೂ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಮಾಜಿ ಯೋಧರಾಗಿರುವ ಕಶ್ಯಪ್ ಪ್ರಸ್ತುತ ಖಾಸಗಿ ಭದ್ರತಾ ಸಂಸ್ಥೆಯಲ್ಲಿ ಹಿರಿಯ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪತ್ನಿ ಮತ್ತು ಪುತ್ರ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕಾಗಿ ಊರಿಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಕಶ್ಯಪ್ ತಮ್ಮ ಪೋಷಕರಿಗೆ ಊಟ ನೀಡಿದ್ದರು. ಮರುದಿನ ಬೆಳಗ್ಗೆ ಇಬ್ಬರೂ ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಕೊಲೆ ಹಾಗೂ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ದಂಪತಿಯ ಸಾವಿಗೆ ಇತರೆ ಯಾವುದೇ ಕಾರಣಗಳಿವೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



