ರಾಜ್ಯ

ಐಟಿ ತಂತ್ರಜ್ಞಾನ ಬಳಸಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಬೇಕಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಲು ಆದ್ಯತೆ ನೀಡಬೇಕು.

ಐಟಿ ತಂತ್ರಜ್ಞಾನ ಬಳಸಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರಿನ ಪೊಲೀಸ್ ಕಂಪ್ಯೂಟರ್ ವಿಭಾಗದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ
Published On :

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ)ಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಪೊಲೀಸ್ ಸೇವೆಗಳನ್ನು ಮತ್ತಷ್ಟು ಪಾರದರ್ಶಕ, ದಕ್ಷ ಹಾಗೂ ಜನಸ್ನೇಹಿಯನ್ನಾಗಿ ರೂಪಿಸಬೇಕು ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೇಂದ್ರ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗವಾದ ಪೊಲೀಸ್ ಕಂಪ್ಯೂಟರ್ ವಿಂಗ್ (Police Computer Wing - PCW)ಗೆ ಶನಿವಾರ ಭೇಟಿ ನೀಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಲಾಖೆಯ ಕಾರ್ಯವೈಖರಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಬೇಕಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಲು ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಇದರ ಜೊತೆಗೆ, ಪೊಲೀಸ್ ಇಲಾಖೆಯ ಡಿಜಿಟಲ್ ಸೇವೆಗಳು ಮತ್ತು ಮಾಹಿತಿ ವ್ಯವಸ್ಥೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ರಾಜ್ಯದ ಡಿಜಿಟಲ್ ಪೊಲೀಸ್ ವ್ಯವಸ್ಥೆಯ ಪ್ರಮುಖ ತಾಂತ್ರಿಕ ಮೂಲಸೌಕರ್ಯಗಳ ಕಾರ್ಯನಿರ್ವಹಣೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಯಿತು.

ರಾಜ್ಯ ಪೊಲೀಸ್ ಡೇಟಾ ಸೆಂಟರ್, ಕ್ರೈಮ್ ಅಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಅಂಡ್ ಸಿಸ್ಟಮ್ಸ್ (CCTNS), ಸೈಬರ್ ಕಮಾಂಡ್ ಸೆಂಟರ್, ಸೈಬರ್ ಎಮರ್ಜೆನ್ಸಿ ನೆಟ್‌ವರ್ಕ್ (CEN) ಘಟಕಗಳು, ಸಾರ್ವಜನಿಕ ಸೇವೆಗಾಗಿ ಅಭಿವೃದ್ಧಿಪಡಿಸಿರುವ ಕೆಎಸ್‌ಪಿ ಆ್ಯಪ್ (KSP App) ಹಾಗೂ ಸ್ಮಾರ್ಟ್ ಇ-ಬೀಟ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಲಾಯಿತು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಮುಖ ಎಂಟರ್‌ಪ್ರೈಸ್ ರಿಸೋರ್ಸ್ ಪ್ಲಾನಿಂಗ್ (ERP) ವೇದಿಕೆಯಾದ Police IT v2 ಯೋಜನೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು.

ಅಪರಾಧ ದಾಖಲೆಗಳ ನಿರ್ವಹಣೆ, ಸಂಚಾರ ವ್ಯವಸ್ಥೆ, ಇಲಾಖೆಯ ಆಡಳಿತ ಮತ್ತು ಇತರೆ ಸೇವೆಗಳನ್ನು ಏಕೀಕರಿಸುವ ಈ ವೇದಿಕೆಯನ್ನು ಇನ್ನಷ್ಟು ಆಧುನೀಕರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

ಇದಲ್ಲದೆ, ಪೊಲೀಸ್ ಇಲಾಖೆಯ ಡಿಜಿಟಲ್ ವ್ಯವಸ್ಥೆಯನ್ನು ಆಧುನೀಕರಿಸುವುದು, ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸುವುದು, ವಿವಿಧ ಡಿಜಿಟಲ್ ವ್ಯವಸ್ಥೆಗಳ ನಡುವೆ ಸಮನ್ವಯ ಹೆಚ್ಚಿಸುವುದು ಹಾಗೂ ಪೊಲೀಸ್ ಕಾರ್ಯಾಚರಣೆಗಾಗಿ ಏಕೀಕೃತ ಡಿಜಿಟಲ್ ವ್ಯವಸ್ಥೆ ರೂಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗೃಹ ಇಲಾಖೆಯ 100 ದಿನಗಳ ಕಾರ್ಯಯೋಜನೆಯ ಭಾಗವಾಗಿ ಕರ್ನಾಟಕದಲ್ಲಿ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಹಾಗೂ ಬುದ್ಧಿವಂತ ಪೊಲೀಸ್ ವ್ಯವಸ್ಥೆ ರೂಪಿಸಲು ಕೈಗೊಳ್ಳಬೇಕಾದ ತ್ವರಿತ ಮತ್ತು ಪರಿಣಾಮಕಾರಿ ಕ್ರಮಗಳ ಕುರಿತು ಕೂಡ ಸಭೆಯಲ್ಲಿ ಸಮಾಲೋಚನೆ ನಡೆಯಿತು.

ಈ ವೇಳೆ ಜನರಿಗೆ ತ್ವರಿತ, ಪಾರದರ್ಶಕ ಹಾಗೂ ಗುಣಮಟ್ಟದ ಸೇವೆ ನೀಡುವ ನಿಟ್ಟಿನಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.