ಗ್ರಾಮೀಣ ಉದ್ಯೋಗ ಯೋಜನೆಗೆ "ಮಹಾತ್ಮ ಗಾಂಧಿ VB-G RAM G" ಎಂದು ಮರುನಾಮಕರಣ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ
ಭಾರತವನ್ನು ಗ್ರಾಮಗಳ ದೇಶವಾಗಿ ರೂಪಿಸುವ ಕನಸು ಕಂಡವರು ಮಹಾತ್ಮ ಗಾಂಧಿ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಂತಹ ಮಹತ್ವದ ಯೋಜನೆಯಿಂದ ಅವರ ಹೆಸರನ್ನು ತೆಗೆದುಹಾಕಬಾರದು.

ಬೆಂಗಳೂರು: ಹೊಸ ಗ್ರಾಮೀಣ ಉದ್ಯೋಗ ಯೋಜನೆಯನ್ನು "ಮಹಾತ್ಮ ಗಾಂಧಿ ವಿಬಿ-ಜಿ ರಾಮ್ ಜಿ" (Mahatma Gandhi VB-G RAM G) ಎಂದು ಮರುನಾಮಕರಣ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಿದೆ.
ಸೋಮವಾರ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಈ ಬೇಡಿಕೆಯನ್ನು ಕೇಂದ್ರದ ಮುಂದೆ ಮಂಡಿಸಿದರು.
ಕೇಂದ್ರ ಸರ್ಕಾರದ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದರೂ, ಬಡವರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಹಿತದೃಷ್ಟಿಯಿಂದ ಜುಲೈ 1ರಿಂದ ಹೊಸ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ.
ಭಾರತವನ್ನು ಗ್ರಾಮಗಳ ದೇಶವಾಗಿ ರೂಪಿಸುವ ಕನಸು ಕಂಡವರು ಮಹಾತ್ಮ ಗಾಂಧಿ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಂತಹ ಮಹತ್ವದ ಯೋಜನೆಯಿಂದ ಅವರ ಹೆಸರನ್ನು ತೆಗೆದುಹಾಕಬಾರದು. ಒಂದು ವೇಳೆ ಹೆಸರು ಬದಲಾಯಿಸುವುದೇ ಆದರೆ, ದೇಶದ 2.68 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು ಇಡಲಿ" ಎಂದು ಆಗ್ರಹಿಸಿದರು.
ಹೊಸ ಯೋಜನೆಯಡಿ ಕೇವಲ ಬೆಳೆ ಕೊಯ್ಲು ಅವಧಿಗೆ ಮಾತ್ರ ಉದ್ಯೋಗ ನೀಡುವ ಬದಲು, ವರ್ಷದ 365 ದಿನಗಳೂ ಗ್ರಾಮೀಣ ಕುಟುಂಬಗಳು ಕೆಲಸ ಕೇಳಿದಾಗ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಯೋಜನೆಯಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ 60:40 ಕೇಂದ್ರ-ರಾಜ್ಯ ಅನುದಾನ ಹಂಚಿಕೆ ಮಾದರಿಗೆ ವಿರೋಧ ವ್ಯಕ್ತಪಡಿಸಿದರು.
ಈ ಮಾದರಿಯಿಂದ ರಾಜ್ಯಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಯಲ್ಲಿರುವಂತೆ 90:10 ಕೇಂದ್ರ-ರಾಜ್ಯ ಅನುದಾನ ಅನುಪಾತವನ್ನೇ ಮುಂದುವರಿಸಬೇಕು" ಎಂದು ಆಗ್ರಹಿಸಿದರು.
ಇದೇ ವೇಳೆ, 15ನೇ ಹಣಕಾಸು ಆಯೋಗದಡಿ ಕರ್ನಾಟಕಕ್ಕೆ ಬಾಕಿ ಇರುವ 2,186 ಕೋಟಿ ರೂ. ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



