BJP ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಡಿ.ಕೆ ಶಿವಕುಮಾರ್'ಗೆ ಹೈಕೋರ್ಟ್ ಬಿಗ್ ರಿಲೀಫ್
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಬೆಂಗಳೂರು: ಬಿಜೆಪಿ ನಾಯಕರನ್ನು ಟೀಕಿಸುವ ಉದ್ದೇಶದಿಂದ ಆಕ್ಷೇಪಾರ್ಹ ಬರಹಗಳಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ.ಶಿವಕುಮರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು.
ಶಿವಕುಮಾರ್ ಪರವಾಗಿ ವಕೀಲ ಪ್ರವೀಣ್ ಗೌಡ ಅವರು ವಾದ ಮಂಡಿಸಿದರು. ವಾದವನ್ನು ಪರಿಗಣಿಸಿದ ನ್ಯಾಯಪೀಠವು ಪ್ರಕರಣದ ಮುಂದಿನ ಕ್ರಮಗಳಿಗೆ ಮಧ್ಯಂತರ ತಡೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ಸೂಚಿಸಿದೆ.
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀಕಾಂತ್ ಬಂಧನವನ್ನು ವಿರೋಧಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿಜೆಪಿ ನಾಯಕರು ‘ನಾನು ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಫಲಕಗಳನ್ನು ಹಿಡಿದು ಅಭಿಯಾನ ನಡೆಸಿದ್ದರು.
ಈ ಅಭಿಯಾನವನ್ನು ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ವಿಜಯೇಂದ್ರ ಅವರ ಚಿತ್ರ ಬಳಸಿ ‘ನಾನು ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ, ರೂ.40 ಸಾವಿರ ಕೋಟಿ ಅಕ್ರಮದಲ್ಲಿ ಪಾಲುದಾರನಾದ ನನ್ನನ್ನೂ ಬಂಧಿಸಿ’ ಎಂಬ ಬರಹದ ಪೋಸ್ಟ್ ಹಂಚಿಕೊಂಡಿತ್ತು. ಹಾಗೆಯೇ ಶಾಸಕ ಸುನೀಲ್ ಕುಮಾರ್ ಅವರ ಚಿತ್ರ ಬಳಸಿ ‘ನಾನು ಪರಶುರಾಮ ಮೂರ್ತಿ ಕಂಚನ್ನು ಕದ್ದಿದ್ದೇನೆ, ಸಿಮೆಂಟ್ ಕದ್ದಿದ್ದೇನೆ, ನನ್ನನ್ನೂ ಬಂಧಿಸಿ’ ಎಂಬ ಬರಹವಿರುವ ಚಿತ್ರವನ್ನು ಕೆಪಿಸಿಸಿ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಪ್ರಕಟಿಸಿತ್ತು.
ಈ ಹಿನ್ನೆಲೆಯಲ್ಲಿ ಬಿಜೆಪಿ ಕಾನೂನು ಘಟಕದ ಸಂಚಾಲಕ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಬಿ.ಆರ್. ನಾಯ್ಡು ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



