News wrap 11-03-2026 | ಇಂಧನ ಬೆಲೆ ಏರಿಕೆ ಭೀತಿ; 4 ಸಾವಿರ ಲೀಟರ್ ಡೀಸೆಲ್ ದಾಸ್ತಾನು ಮಾಡಿದ್ದ ವ್ಯಕ್ತಿ ಬಂಧನ; ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಸಮಸ್ಯೆ ಇಲ್ಲ- ಕೆ.ಹೆಚ್ ಮುನಿಯಪ್ಪ

1. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಸಮಸ್ಯೆ ಇಲ್ಲ- KH Muniyappa
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ನಗರದ ಆಹಾರ ಭವನದಲ್ಲಿ IOC, BPC, HPC, GAIL ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಚಿವರು, ಆತಂಕಪಟ್ಟು ಗ್ರಾಹಕರು ಹೆಚ್ಚು ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು. ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ ತಿಂಗಳಿಗೆ ಒಂದು ಸಿಲಿಂಡರ್ ನೀಡಲಾಗುತ್ತದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತು ಆಯಿಲ್ ಕಂಪನಿಗಳ ಜೊತೆ ಸಹಕರಿಸಬೇಕೆಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು. ಹಳ್ಳಿಗಳಾಗಲಿ, ನಗರದಲ್ಲಿರಲಿ ಜನರು, ಅಡಿಗೆ ಅನಿಲವನ್ನು ಮಿತವಾಗಿ ಅವಶ್ಯಕತೆ ಇದ್ದರೆ ಮಾತ್ರ ಬಳಸಬೇಕು ಎಂದು ಗ್ರಾಹಕರಲ್ಲಿ ಮನವಿ ಮಾಡಿದರು. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯಲ್ಲಿ ಅಡಚಣೆ ಉಂಟಾಗಬಹುದೆಂಬ ಆತಂಕದ ನಡುವೆ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ ಉಂಟಾಗಿದೆ. ಹಲವು ಗ್ರಾಹಕರು ಬುಕಿಂಗ್ ಗೆ ಯತ್ನಿಸಿದ್ದು, ಈ ವೇಳೆ ಬುಕಿಂಗ್ ನಂಬರ್ ಸ್ವಿಚ್ ಆಫ್ ಎಂದು ಬಂದಿದ್ದು ಗ್ರಾಹಕರು ತೀವ್ರ ಆತಂಕಗೊಂಡಿದ್ದಾರೆ.
2. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಹುದ್ದೆಗೆ 90 ದಿನಗಳ ಒಳಗಾಗಿ ನೇಮಕಾತಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ
ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಿಧಾನಸಭೆಯಲ್ಲಿ ಬುಧವಾರ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
3. ಹುಬ್ಬಳ್ಳಿ ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ವಿಮಾನಗಳಾಗಿ ಘೋಷಿಸಿ: ಕೇಂದ್ರಕ್ಕೆ ಎಂಬಿ ಪಾಟೀಲ್ ಮನವಿ
ತಮಿಳುನಾಡಿನ ಮದುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸದೆ ಇರುವುದು ತಾರತಮ್ಯ ಧೋರಣೆಯಾಗಿದೆ. ಇದು ಸರ್ವಥಾ ಸರಿಯಲ್ಲ. ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ರಾಜ್ಯದ ಬೇಡಿಕೆ ಬಗ್ಗೆ ಅದು ಉದಾಸೀನ ಮನೋಭಾವ ಪ್ರದರ್ಶಿಸಿರುವುದು ಸರಿಯಲ್ಲ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕು. ಇದರಿಂದ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಆಗುತ್ತದೆ ಎಂದು ಕಳೆದ ವರ್ಷ(2025ರ ಜೂನ್ 24ರಂದು) ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆಯಲಾಗಿತ್ತು. ಆದರೆ ಇದಕ್ಕೆ ಕೇಂದ್ರ ಇದುವರೆಗೂ ಸ್ಪಂದಿಲ್ಲ ಎಂದು ಸಚಿವರು ಹೇಳಿದ್ದಾರೆ.
4. ವಿಧಾನ ಪರಿಷತ್ತಿನ ಪದವೀಧರ ಶಿಕ್ಷಕರ ಕ್ಷೇತ್ರಗಳಿಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಟಿಕೆಟ್ ವಂಚಿತ ಅಭ್ಯರ್ಥಿ ರಾಜೀನಾಮೆ
ರಾಜ್ಯ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನವೆಂಬರ್ 2026 ರಲ್ಲಿ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮಂಗಳವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 3 ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪ್ರಕಟಿಸಿದೆ. ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
5. ಇಂಧನ ಬೆಲೆ ಏರಿಕೆ ಭೀತಿ; 4 ಸಾವಿರ ಲೀಟರ್ ಡಿಸೆಲ್ ದಾಸ್ತಾನು ಮಾಡಿದ್ದ ವ್ಯಕ್ತಿ ಬಂಧನ!
ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯಿಂದ ಇಂಧನ ಬೆಲೆ ಏರಿಕೆಯಾಗಬಹುದು ಎಂಬ ಭಯದಿಂದ ವ್ಯಕ್ತಿಯೊಬ್ಬರು ಅಕ್ರಮವಾಗಿ ಸಂಗ್ರಹಿಸಿದ್ದ 4 ಸಾವಿರ ಲೀಟರ್‌ಗಿಂತಲೂ ಅಧಿಕ ಡೀಸೆಲ್ ನ್ನು ಬೆಳ್ತಂಗಡಿಯಲ್ಲಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ನಿಖರ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರು ಮಾರ್ಚ್ 9ರ ರಾತ್ರಿ ಕಣಿಯೂರು ಗ್ರಾಮದ ಮುಡಲ್ತಿಯಾರ್‌ನಲ್ಲಿ ದಾಳಿ ನಡೆಸಿದರು. ಜಗದೀಶ್ (35ವ) ಅವರ ನಿವಾಸದ ಸಮೀಪದ ಒಂದು ಶೆಡ್‌ನ್ನು ಪೊಲೀಸರು ಪರಿಶೀಲಿಸಿದಾಗ, ಡ್ರಮ್‌ಗಳು ಮತ್ತು ಕ್ಯಾನ್‌ಗಳಲ್ಲಿ ದೊಡ್ಡ ಪ್ರಮಾಣದ ಡೀಸೆಲ್ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


